janadhvani

Kannada Online News Paper

ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಡಿಸಿಎಂ ಆಗಿ ಡಿ.ಕೆ. ಶಿವಕುಮಾರ್ ಪ್ರಮಾಣವಚನ

ರಾಜ್ಯದಲ್ಲಿ ಹೊಸ ಕಾಂಗ್ರೆಸ್ ಸರ್ಕಾರ ಅಧಿಕೃತವಾಗಿ ಅಸ್ತಿತ್ವಕ್ಕೆ

ಬೆಂಗಳೂರು,ಮೇ.20: ರಾಜ್ಯದ ನೂತನ ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಇಂದು ಮಧ್ಯಾಹ್ನ ಪ್ರಮಾಣವಚನ ಸ್ವೀಕರಿಸಿದರು. ಉಪ ಮುಖ್ಯಮಮತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರೂ ಪ್ರತಿಜ್ಞಾವಿಧಿ ಸ್ವೀಕರಿಸಿದರು. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು. ಜತೆಗೆ ಎಂಟು ಮಂದಿ ಶಾಸಕರು ಸಚಿವರಾಗಿಯೂ ಪದಗ್ರಹಣ ಮಾಡಿದರು.

ಇದರೊಂದಿಗೆ, ರಾಜ್ಯದಲ್ಲಿ ಹೊಸ ಕಾಂಗ್ರೆಸ್ ಸರ್ಕಾರ ಅಧಿಕೃತವಾಗಿ ಅಸ್ತಿತ್ವಕ್ಕೆ ಬಂದಿದದೆ. ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ಕಾಂಗ್ರೆಸ್ ನಾಯಕರು, ರಾಜ್ಯ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು, ಬೆಂಬಲಿಗರು ಸೇರಿದಂತೆ ಲಕ್ಷಾಂತರ ಮಂದಿ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಸಾಕ್ಷಿಯಾದರು.

ದೇವರ ಹೆಸರಿನಲ್ಲಿ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕರಿಸಿದರೆ, ಶ್ರೀ ಗಂಗಾಧರ ಅಜ್ಜನ ಹೆಸರಿನಲ್ಲಿ ಡಿಕೆ ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದರು.

ಪ್ರಮಾಣವಚನ ಸ್ವೀಕರಿಸಿದವರು
ಡಾ. ಜಿ ಪರಮೇಶ್ವರ, ಕೆಹೆಚ್ ಮುನಿಯಪ್ಪ, ಕೆಜೆ ಜಾರ್ಜ್, ಎಂಬಿ ಪಾಟೀಲ್, ಸತೀಶ್ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ, ರಾಮಲಿಂಗಾ ರೆಡ್ಡಿ ಹಾಗೂ ಬಿಝಡ್ ಜಮೀರ್ ಅಹ್ಮದ್ ಅವರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.

ಪ್ರಮಾಣವನಚನಕ್ಕೆ ಸಾಕ್ಷಿ
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಕೆ.ಸಿ.ವೇಣುಗೋಪಾಲ್, ರಣದೀಪ್ ಸುರ್ಜೇವಾಲ ಹಾಗೂ ಇತರರ ಉಪಸ್ಥಿತಿಯಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭ ನೆರವೇರಿತು. ಜತೆಗೆ, ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್, ಛತ್ತೀಸ್‌ಗಢ ಸಿಎಂ ಭೂಪೇಶ್ ಬಘೇಲ್, ಬಿಹಾರ ಸಿಎಂ ನಿತೀಶ್, ಹಿಮಾಚಲಪ್ರದೇಶದ ಸಿಎಂ ಸುಖ್‌ವಿಂದರ್ ಸಿಂಗ್ ಸುಖು, ಪುದುಚೆರಿ ಸಿಎಂ ರಂಗಸ್ವಾಮಿ, ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್‌, ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್ ಹಾಗೂ ಇನ್ನೂ ಅನೇಕರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.

ಮೇ 10ರಂದು ನಡೆದಿದ್ದ ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಮೇ 13ರಂದು ಪ್ರಕಟವಾಗಿತ್ತು. ಕಾಂಗ್ರೆಸ್ ಪಕ್ಷವು 135 ಸ್ಥಾನ ಪಡೆದು ಭರ್ಜರಿ ಬಹುಮತ ಗಳಿಸಿತ್ತು. ನಂತರ, ದೆಹಲಿಯಲ್ಲಿ ಮೂರು ದಿನಗಳ ಕಾಲ ನಡೆದ ಸರಣಿ ಮಾತುಕತೆಗಳ ನಂತರ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿಯನ್ನಾಗಿಯೂ ಡಿಕೆ ಶಿವಕುಮಾರ್ ಅವರನ್ನು ಉಪಮುಖ್ಯಮಂತ್ರಿಯನ್ನಾಗಿಯೂ ಮನವೊಲಿಸುವಲ್ಲಿ ಹೈಕಮಾಂಡ್ ಯಶಸ್ವಿಯಾಗಿತ್ತು.

ಸಿಎಂ ಕಚೇರಿ ನಾಮಫಲಕ ಬದಲಾವಣೆ
ಸಿದ್ದರಾಮಯ್ಯ ಅವರು ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆಯೇ ವಿಧಾನಸೌಧದಲ್ಲಿರುವ ಸಿಎಂ ಕಚೇರಿಯ ನಾಮಫಲಕ ಬದಲಾವಣೆ ಮಾಡಲಾಯಿತು. ವಿಧಾನಸೌಧದ ಮೂರನೇ ಮಹಡಿಯಲ್ಲಿರುವ ಕೊಠಡಿ ಸಂಖ್ಯೆ 323ರಲ್ಲಿ ನಿರ್ಗಮಿತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹೆಸರು ತೆಗೆದು ಸಿದ್ದರಾಮಯ್ಯ ಹೆಸರಿನ ಬೋರ್ಡ್ ಅಳವಡಿಕೆ ಮಾಡಲಾಯಿತು.

error: Content is protected !! Not allowed copy content from janadhvani.com