janadhvani

Kannada Online News Paper

ಕೇಂದ್ರದಿಂದ ಅಕ್ಕಿ ಪೂರೈಕೆ ರದ್ದು: ‘ಅನ್ನಭಾಗ್ಯ’ ಯೋಜನೆಯನ್ನು ತಡೆಯುವ ಷಡ್ಯಂತ್ರ- ಸಿ.ಎಂ ಆಕ್ರೋಶ

ಕೇಂದ್ರ ಸರ್ಕಾರ ಕನ್ನಡಿಗರ, ಬಡವರ ವಿರೋಧಿ ಎನ್ನುವುದರಲ್ಲಿ ಸಂಶಯವಿಲ್ಲ

ಬೆಂಗಳೂರು, ಜೂ. 14- ರಾಜ್ಯಕ್ಕೆ ಅಕ್ಕಿ ನೀಡುವ ವಿಚಾರದಲ್ಲಿ ಕೇಂದ್ರ ಸರ್ಕಾರ ರಾಜಕೀಯ ಮಾಡುವ ಮೂಲಕ ಕನ್ನಡಿಗರ ಪಾಲನ್ನು, ಬಡವರ ಪಾಲನ್ನು ಕಸಿದುಕೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇರ ವಾಗ್ದಾಳಿ ನಡೆಸಿದ್ದಾರೆ.

ಕೇಂದ್ರ ಸರ್ಕಾರ ಕನ್ನಡಿಗರ, ಬಡವರ ವಿರೋಧಿ ಎನ್ನುವುದರಲ್ಲಿ ಸಂಶಯವಿಲ್ಲ ಎಂದು ಹೇಳಿದ್ದಾರೆ.

ರಾಜ್ಯ ಸರ್ಕಾರ ಈಗಾಗಲೇ ಒಂದು ಗ್ಯಾರಂಟಿ ಯೋಜನೆ ಜಾರಿಮಾಡಿದ್ದು, ಜುಲೈ 1 ರಂದು ಅಂತ್ಯೋದಯ ಹಾಗೂ ಬಿಪಿಎಲ್‌ ಕಾರ್ಡುದಾರರಿಗೆ ಪ್ರತಿ ತಿಂಗಳು ತಲಾ 10 ಕೆಜಿ ಅಕ್ಕಿ ನೀಡಲು ತೀರ್ಮಾನಿಸಲಾಗಿದ್ದ ಹಿನ್ನೆಲೆಯಲ್ಲಿ ಭಾರತೀಯ ಆಹಾರ ಮಂಡಳಿ ಉಪ ಪ್ರಧಾನ ವ್ಯವಸ್ಥಾಪಕರಿಗೆ 2.28 ಲಕ್ಷ ಮೆ.ಟನ್ ಅಗತ್ಯವಿದೆ ಎಂದು ಕೋರಿ ಜೂನ್‌ 9 ರಂದು ಪತ್ರ ಬರೆಯಲಾಗಿತ್ತು ಎಂದು ತಿಳಿಸಿದ್ದಾರೆ.

ಜೂನ್‌ 12 ರಂದು ಭಾರತೀಯ ಆಹಾರ ನಿಗಮ ಒಪ್ಪಿಗೆ ಸೂಚಿಸಿ ಕ್ವಿಂಟಾಲ್‌ ಗೆ 3400 ರೂ. ದರದಲ್ಲಿ ಅಕ್ಕಿ ಪೂರೈಕೆ ಮಾಡವುದಾಗಿ ಪತ್ರ ಬರೆದಿತ್ತು. ಇದಾದ ನಂತರ ಕೇಂದ್ರ ಸರ್ಕಾರ ರಾಜಕೀಯ ನಿರ್ಧಾರ ತೆಗೆದುಕೊಂಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜೂನ್ 13 ರಂದು ಭಾರತ ಸರ್ಕಾರದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವಾಲಯವು ಭಾರತೀಯ ಆಹಾರ ನಿಗಮಕ್ಕೆ ಪತ್ರ ಬರೆಗೆ 15 ಲಕ್ಷ ಮೆ.ಟನ್ ಗೋಧಿ ಹಾಗೂ ಅಕ್ಕಿಯನ್ನು ತೆರೆದ ಮಾರುಕಟ್ಟೆಯಲ್ಲಿ ಮಾರಾಟ ಯೋಜನೆಯಡಿ ಮಾರಾಟ ಮಾಡಲು ಸೂಚಿಸಿದೆ ಎಂದರು.

ಈಶಾನ್ಯ ರಾಜ್ಯಗಳನ್ನು ಹೊರತು ಪಡಿಸಿ, ಇತರ ರಾಜ್ಯಗಳಿಗೆ ಮಾರಾಟ ಮಾಡುವುದನ್ನು ಸ್ಥಗಿತಗೊಳಿಸುವಂತೆ ಸೂಚಿಸಲಾಗಿರುವ ಪತ್ರದ ವಿವರಗಳನ್ನು ಓದಿ ಹೇಳಿದ ಮುಖ್ಯಮಂತ್ರಿಗಳು, ಕೇಂದ್ರ ಸರ್ಕಾರ ರಾಜಕೀಯವಾಗಿ ನಿರ್ಧಾರ ಕೈಗೊಂಡಿದೆ ಎಂದು ಆರೋಪಿಸಿದರು.

ಎಫ್‌.ಸಿ.ಐ. ಒಪ್ಪಿಗೆ ಪತ್ರದ ಆಧಾರದ ಮೇಲೆ ಜುಲೈ 1 ರಿಂದ ಜಾರಿ ಮಾಡಲಾಗುವುದು ಎಂದು ಘೋಷಿಸಿದೆವು. ಎಫ್.ಸಿ.ಐ ನ ಪ್ರಧಾನ ವ್ಯವಸ್ಥಾಪಕ ಹರೀಶ್ ಎಂಬುವರು 7 ಲಕ್ಷ ಟನ್ ಅಕ್ಕಿ ಸಂಗ್ರಹ ಇದೆ ಎಂದು ತಿಳಿಸಿದ್ದಾರೆ. ಅನ್ನಭಾಗ್ಯ ಕಾರ್ಯಕ್ರಮವನ್ನು ಜಾರಿಗೊಳಿಸದೇ ಇರುವಂತೆ ಅಡ್ಡಿಪಡಿಸುವುದು ಇದರ ಹಿಂದಿನ ಉದ್ದೇಶ ಎಂದು ಮುಖ್ಯಮಂತ್ರಿಗಳು ಆರೋಪಿಸಿದರು.

ಅಕ್ಕಿ ಬೆಳೆಯುವ ರಾಜ್ಯಗಳಾದ ಪಂಜಾಬ್, ತೆಲಂಗಾಣ, ಆಂಧ್ರ, ಛತ್ತಿಸ್‍ಗಡ್, ಹರಿಯಾಣದವರಿಗೆ ಈಗಾಗಲೇ ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಮಾತನಾಡಿದ್ದಾರೆ. ಪಂಜಾಬ್ ರಾಜ್ಯದಲ್ಲಿ ಅಕ್ಕಿ ಸಂಗ್ರಹವಿಲ್ಲದಿರುವುದರಿಂದ ಅಕ್ಕಿ ಪೂರೈಸಲು ಆಗುವುದಿಲ್ಲ ಎಂದಿದ್ದಾರೆ.

ನಾಳೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಅವರು ತೆಲಂಗಾಣ ಮುಖ್ಯಮಂತ್ರಿಗಳನ್ನು ಭೇಟಿಯಾಗಲಿದ್ದಾರೆ. ಅಂತೆಯೇ ಛತ್ತೀಸ್‌ಗಢ ರಾಜ್ಯದಿಂದಲೂ ಲಭ್ಯವಿರುವ ಅಕ್ಕಿಯ ಮಾಹಿತಿ ಇಂದು ಸಂಜೆಯೊಳಗೆ ಲಭಿಸಲಿದೆ. ನಾಳೆ ಸಂಜೆಯೊಳಗೆ ಒಂದು ಸ್ಪಷ್ಟ ಚಿತ್ರಣ ದೊರೆಯಲಿದೆ ಎಂದು ಆಶಾಭಾವ ವ್ಯಕ್ತಪಡಿಸಿದರು.

ಅಕ್ಕಿ ಇಟ್ಟುಕೊಂಡು ಕೊಡಲಾಗುವುದಿಲ್ಲ ಎಂದರೆ ಇವರನ್ನು ಬಡವರ ವಿರೋಧಿಗಳು ಎಂದು ಕರೆಯಬೇಕು. ಕೇಂದ್ರ ಸರ್ಕಾರ ಉಚಿತವಾಗಿಯೇನೂ ಅಕ್ಕಿ ನೀಡುವುದಿಲ್ಲ ನಾವು ಹಣ ನೀಡಿ ಪಡೆಯುವುದು. ಇತರರಿಗೆ ಕೊಡುವ ರೀತಿಯಲ್ಲಿ ನಮಗೂ ಕೊಡುತ್ತಿದ್ದರು. ಆದರೆ ಈಗ ಕರ್ನಾಟಕ ರಾಜ್ಯ ಸರ್ಕಾರಕ್ಕೆ ನೀಡುವುದಿಲ್ಲ ಎನ್ನುವ ತೀರ್ಮಾನಕ್ಕೆ ಅವರು ಬಂದಿದ್ದಾರೆ. ಈಗಲೂ ನಾವು ಪ್ರಯತ್ನ ಮಾಡುತ್ತಿದ್ದೇವೆ. ಪುನ: ಮನವಿ ಮಾಡುವುದು ಇದ್ದೇ ಇರುತ್ತದೆ ಆದರೆ ಈ ರೀತಿ ಮಾಡಿರುವುದರಿಂದ ಇದೊಂದು ಷಡ್ಯಂತ್ರ ಎಂದೇ ಪರಿಗಣಿಸಬೇಕಾಗುತ್ತದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಆಹಾರ ಮಾತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್.ಮುನಿಯಪ್ಪ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್ ಉಪಸ್ಥಿತರಿದ್ದರು.

error: Content is protected !! Not allowed copy content from janadhvani.com