janadhvani

Kannada Online News Paper

ರಾಹುಲ್ ಗಾಂಧಿಗೆ ಬಿಗ್ ರಿಲೀಫ್- ಗರಿಷ್ಠ ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆ

ಅವರು ವಯನಾಡ್‌ ಸಂಸದರಾಗಿಯೇ ಮುಂದುವರಿಯಬಹುದು ಹಾಗೂ ಪ್ರಸ್ತುತ ಸಂಸತ್‌ ಅಧಿವೇಶನದಲ್ಲಿ ಭಾಗಿಯಾಗಬಹುದು ಎಂದೂ ತಿಳಿದುಬಂದಿದೆ.

ನವದೆಹಲಿ: ಮೋದಿ ಉಪನಾಮದ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್‌ ಗಾಂಧಿಗೆ ಬಿಗ್‌ ರಿಲೀಫ್‌ ಸಿಕ್ಕಿದೆ. ‘ಮೋದಿ ಉಪನಾಮ’ ಹೇಳಿಕೆಗಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಗರಿಷ್ಠ ಶಿಕ್ಷೆಗೆ ಸುಪ್ರೀಂ ಕೋರ್ಟ್(Supreme Court) ತಡೆ ನೀಡಿದೆ.

ರಾಹುಲ್‌ ಗಾಂಧಿಗೆ 2 ವರ್ಷ ಜೈಲು ಶಿಕ್ಷೆ ಎತ್ತಿ ಹಿಡಿದಿದ್ದ ಗುಜರಾತ್‌ ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂಕೋರ್ಟ್‌ ತಡೆ ನೀಡಿದೆ. ಇದರಿಂದ ರಾಹುಲ್‌ ಗಾಂಧಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಬಹುದಾಗಿದೆ. ಅಲ್ಲದೆ, ಅವರು ವಯನಾಡ್‌ ಸಂಸದರಾಗಿಯೇ ಮುಂದುವರಿಯಬಹುದು ಹಾಗೂ ಪ್ರಸ್ತುತ ಸಂಸತ್‌ ಅಧಿವೇಶನದಲ್ಲಿ ಭಾಗಿಯಾಗಬಹುದು ಎಂದೂ ತಿಳಿದುಬಂದಿದೆ.

ವಿಚಾರಣಾ ನ್ಯಾಯಾಲಯವು ಗರಿಷ್ಠ ಶಿಕ್ಷೆಯನ್ನು ಏಕೆ ವಿಧಿಸಿದೆ ಎಂದು ತೀರ್ಪಿನಲ್ಲಿ ತಿಳಿಸಲಾಗಿಲ್ಲ ಎಂದು ನ್ಯಾಯಾಲಯ ಗಮನಿಸಿದೆ. ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ, ಪಿಎಸ್ ನರಸಿಂಹ ಮತ್ತು ಸಂಜಯ್ ಕುಮಾರ್ ಅವರನ್ನೊಳಗೊಂಡ ಪೀಠವು ಶುಕ್ರವಾರ ಪ್ರಕರಣದ ವಿಚಾರಣೆ ನಡೆಸಿತು. ಈ ವೇಳೆ ಸೂರತ್ ನ್ಯಾಯಾಲಯದ ಆದೇಶಕ್ಕೆ ತಡೆ ನೀಡಿದೆ.

ರಾಹುಲ್‌ ಗಾಂಧಿ ಹೇಳಿಕೆಯಲ್ಲಿ ಉತ್ತಮ ಅಭಿರುಚಿಯಿಲ್ಲ ಎಂಬುದರಲ್ಲಿ ಸಂದೇಹವಿಲ್ಲ. ಸಾರ್ವಜನಿಕ ಜೀವನದಲ್ಲಿ ವ್ಯಕ್ತಿಗಳು ಸಾರ್ವಜನಿಕ ಭಾಷಣ ಮಾಡುವಾಗ ಎಚ್ಚರಿಕೆ ವಹಿಸಬೇಕು. ರಾಹುಲ್‌ ಗಾಂಧಿ ಹೆಚ್ಚು ಎಚ್ಚರಿಕೆಯಿಂದ ಇರಬೇಕಿತ್ತು ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.

ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್‌ನ ಸೂರತ್‌ ಮ್ಯಾಜಿಸ್ಟ್ರೇಟ್‌ ಕೋರ್ಟ್‌ ವಿಧಿಸಿರುವ ಶಿಕ್ಷೆಗೆ ತಡೆ ನೀಡಲು ನಿರಾಕರಿಸಿದ್ದ ಗುಜರಾತ್‌ ಹೈಕೋರ್ಟ್‌ ಆದೇಶ ಪ್ರಶ್ನಿಸಿ ರಾಹುಲ್‌ ಗಾಂಧಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಆದೇಶದ ವಿರುದ್ಧ ಜು.15 ರಂದು ಸುಪ್ರೀಂಗೆ ಅರ್ಜಿ ಸಲ್ಲಿಸಿದ್ದರು.

ಇಂದು ಎರಡೂ ಕಡೆಯ ವಾದ ಆಲಿಸಿದ ನ್ಯಾಯಾಲಯ ತೀರ್ಪು ನೀಡಿದೆ. ದೂರುದಾರ ಪೂರ್ಣೇಶ್ ಮೋದಿ ಅವರ ಮೊದಲ ಹೆಸರು ಮೋದಿ ಅಲ್ಲ ಎಂದು ರಾಹುಲ್ ಪರ ವಕೀಲ ಮನು ಅಭಿಷೇಕ್ ಸಿಂಘ್ವಿ ವಾದಿಸಿದರು. ರಾಹುಲ್ ಉದ್ದೇಶಪೂರ್ವಕವಾಗಿ ಮೋದಿ ಸಮುದಾಯವನ್ನು ಅವಮಾನಿಸುವ ಉದ್ದೇಶ ಹೊಂದಿಲ್ಲ ಎಂದು ಸಾಕ್ಷಿಗಳೇ ಹೇಳಿದ್ದಾರೆ ಎಂದು ಸಿಂಘ್ವಿ ನ್ಯಾಯಾಲಯಕ್ಕೆ ತಿಳಿಸಿದರು.

ರಾಹುಲ್‌ ಅವರು 2019ರ ಏಪ್ರಿಲ್‌ 13 ರಂದು ಕೋಲಾರದಲ್ಲಿ ನಡೆದ ಲೋಕಸಭಾ ಚುಣಾವಣಾ ಪ್ರಚಾರ ಸಭೆಯಲ್ಲಿ ಭಾಷಣ ಮಾಡಿದ್ದರು. ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತಾ, ಎಲ್ಲಾ ಕಳ್ಳರಿಗೆ ಮೋದಿ ಎಂಬ ಉಪನಾಮ ಏಕಿದೆ ಎಂದು ಪ್ರಶ್ನಿಸಿದ್ದರು. ಈ ಬಗ್ಗೆ ಗುಜರಾತ್‌ ಶಾಸಕ ಪೂರ್ಣೇಶ್‌ ಮೋದಿ ಅವರು, ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಈ ಪ್ರಕರಣದಲ್ಲಿ ರಾಹುಲ್‌ ಅವರು ಎರಡು ವರ್ಷ ಶಿಕ್ಷೆಗೆ ಗುರಿಯಾಗಿ ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಂಡಿದ್ದಾರೆ.

error: Content is protected !! Not allowed copy content from janadhvani.com