janadhvani

Kannada Online News Paper

ಮತ್ತೊಮ್ಮೆ ರಾಜ್ಯಪಾಲರಿಗೆ ಹಕ್ಕು ಮಂಡಿಸಿದ ಬಿಜೆಪಿ

ಬೆಂಗಳೂರು,ಮೇ16-ಕರ್ನಾಟಕ ವಿಧಾನ ಸಭೆ ಚುನಾವಣೆಯ ಅತಂತ್ರ ಫಲಿತಾಂಶದಲ್ಲಿ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಬಿಜೆಪಿ, ಸರ್ಕಾರ ರಚನೆಗೆ ತಮಗೆ ಅವಕಾಶ ನೀಡಬೇಕೆಂದು ಕೋರಿ ರಾಜ್ಯಪಾಲರಿಗೆ ಇಂದು ಎರಡನೇ ಬಾರಿ ಹಕ್ಕು ಮಂಡಿಸಿದೆ. ಪಕ್ಷದ ಕಚೇರಿಯಲ್ಲಿ ಶಾಸಕಾಂಗ ಸಭೆ ನಡೆದ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ , ಕೇಂದ್ರ ಸಚಿವರಾದ ಅನಂತಕುಮಾರ್, ಪ್ರಕಾಶ್ ಜಾವ್ಡೇಕರ್, ಮುರುಳೀಧರ್ ರಾವ್, ಶಾಸಕರಾದ ಅರವಿಂದ ಲಿಂಬಾವಳಿ, ಗೋವಿಂದ ಕಾರಜೋಳ, ಆರ್.ಅಶೋಕ್ ಮತ್ತಿತರರು ರಾಜ್ಯಪಾಲ ವಿ.ಆರ್.ವಾಲಾ ಅವರನ್ನು ಭೇಟಿ ಮಾಡಿದರು.

ಒಟ್ಟು 105 ಶಾಸಕರ ಬೆಂಬಲವುಳ್ಳ ಪತ್ರವನ್ನು ರಾಜ್ಯಪಾಲರಿಗೆ ನೀಡಿದ ನಿಯೋಗ ಸರ್ಕಾರ ರಚನೆಗೆ ಅವಕಾಶ ನೀಡಿದರೆ ಸದನದಲ್ಲಿ ಬಹುಮತ ಸಾಬೀತುಪಡಿಸುವುದಾಗಿ ಹೇಳಿದೆ. ರಾಣೆಬೆನ್ನೂರು ಪಕ್ಷೇತರ ಶಾಸಕ ಆರ್.ಶಂಕರ್ ಕೂಡ ರಾಜಭವನಕ್ಕೆ ಆಗಮಿಸಿ ಬಿಜೆಪಿಗೆ ಬೆಂಬಲ ನೀಡುವ ಪತ್ರವನ್ನು ಖುದ್ದು ರಾಜ್ಯಪಾಲರಿಗೆ ನೀಡಿದ್ದಾರೆ.

ರಾಜ್ಯಪಾಲರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಎಸ್.ಯಡಿಯೂರಪ್ಪ ಶಾಸಕಾಂಗ ಸಭೆಯಲ್ಲಿ ನನ್ನನ್ನು ನಾಯಕನನ್ನಾಗಿ ಆಯ್ಕೆ ಮಾಡಿರುವ ಪತ್ರವನ್ನು ರಾಜ್ಯಪಾಲರಿಗೆ ನೀಡಿದ್ದೇನೆ, ಅತಿದೊಡ್ಡ ಪಕ್ಷವಾಗಿರುವ ನಮಗೆ ಸರ್ಕಾರ ರಚನೆಗೆ ಅವಕಾಶ ನೀಡುವಂತೆ ರಾಜ್ಯಪಾಲರಿಗೆ ಮನವಿ ಮಾಡಲಾಗಿದೆ. ಆದಷ್ಟು ಬೇಗ ಕ್ರಮ ಕೈಗೊಳ್ಳುವ ಭರವಸೆಯನ್ನು ನೀಡಿದ್ದಾರೆ ಎಂದು ಹೇಳಿದರು.   ರಾಜ್ಯಪಾಲರು ಆಹ್ವಾನ ನೀಡಿದರೆ ಸರ್ಕಾರ ರಚಿಸಲು ಪಕ್ಷ ಸಿದ್ಧ್ದವಿದೆ. ಈ ಬಗ್ಗೆ ಕಾರ್ಯಾಂಗದ ಮುಖ್ಯಸ್ಥರಾಗಿರುವ ರಾಜ್ಯಪಾಲರು ಸರಿಯಾದ ಸಮಯದಲ್ಲಿ ಸೂಕ್ತ ಕ್ರಮ ಕೈಗೊಳ್ಳುವ ಭರವಸೆಯನ್ನು ನೀಡಿದ್ದಾರೆ ಎಂದರು.

ನಾಳೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತೀರಾ ಎಂಬ ಪ್ರಶ್ನೆಗೆ, ರಾಜ್ಯಪಾಲರು ಅನುಮತಿ ನೀಡಿದ ತಕ್ಷಣವೇ ಪ್ರಮಾಣ ವಚನ ಸ್ವೀಕರಿಸಲಾಗುವುದು. ಇದರಲ್ಲಿ ಮುಚ್ಚಿಡುವಂತದ್ದು ಏನೂ ಇಲ್ಲ ಎಂದು ಸ್ಪಷ್ಟಪಡಿಸಿದರು. ಇದೀಗ ರಾಜ್ಯಪಾಲರು ಬಿಜೆಪಿಗೆ ಆಹ್ವಾನ ನೀಡುತ್ತಾರೋ ಇಲ್ಲವೋ ಎಂಬುದು ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ.

error: Content is protected !! Not allowed copy content from janadhvani.com