janadhvani

Kannada Online News Paper

ಗ್ಯಾರಂಟಿಗಳಿಗಾಗಿ ರಾಜ್ಯದ ಅಭಿವೃದ್ಧಿಗೆ ಬ್ರೇಕ್: ಆರೋಪ ಶುದ್ಧ ಸುಳ್ಳು-ಸಿಎಂ ಸಿದ್ದರಾಮಯ್ಯ

ಹಿಂದಿನ ಸರ್ಕಾರದಲ್ಲಿ ದುರಾಡಳಿತ, ಸಾಲ ಮತ್ತು ಬದ್ಧತಾ ವೆಚ್ಚ ಮಿತಿಮೀರಿದ್ದರಿಂದ ಆರ್ಥಿಕ ಸ್ಥಿತಿ ಹದಗೆಟ್ಟಿತ್ತು. ರಾಜ್ಯದ ಆರ್ಥಿಕ ಪರಿಸ್ಥಿತಿ ಹಾಳು ಮಾಡಿದವರೇ ಈಗ ನಮ್ಮ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಅವರಿಗೆ ಯಾವ ನೈತಿಕತೆ ಇದೆ?

ಬೆಂಗಳೂರು: ಗ್ಯಾರಂಟಿಗಳಿಗಾಗಿ ರಾಜ್ಯದ ಅಭಿವೃದ್ಧಿಗೆ ಸರ್ಕಾರ ಬ್ರೇಕ್ ಹಾಕಿದೆ ಎಂಬ ಆರೋಪ ಶುದ್ಧ ಸುಳ್ಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಎಕ್ಸ್ ಪ್ಲಾಟ್‌ಫಾರ್ಮ್ ಮೂಲಕ ಮಾಹಿತಿ ನೀಡಿರುವ ಮಾನ್ಯ ಮುಖ್ಯಮಂತ್ರಿಗಳು, ಆರೋಗ್ಯ, ಶಿಕ್ಷಣ, ಕೃಷಿ ಮತ್ತು ವಸತಿ ಕ್ಷೇತ್ರದ ಯೋಜನೆಗಳು ಕಾಲಬದ್ಧವಾಗಿ ಜಾರಿಗೊಳ್ಳುತ್ತಿವೆ. ಕರ್ನಾಟಕ ಬಂಡವಾಳ ಹೂಡಿಕೆದಾರರ ನೆಚ್ಚಿನ ತಾಣವಾಗುತ್ತಿದೆ. ಮೂಲಸೌಕರ್ಯಗಳ ನಿರ್ಮಾಣ ಭರದಿಂದ ಸಾಗಿದೆ. ಉದ್ಯೋಗವಕಾಶಗಳು ಹೆಚ್ಚುತ್ತಿದೆ. ಒಟ್ಟಿನಲ್ಲಿ ರಾಜ್ಯ ಅಭಿವೃದ್ದಿಯ ಪಥದಲ್ಲಿ ದಾಪುಗಾಲಿಡುತ್ತಿದೆ ಎಂದಿದ್ದಾರೆ.

ಹಿಂದಿನ ಸರ್ಕಾರದಲ್ಲಿ ದುರಾಡಳಿತ, ಸಾಲ ಮತ್ತು ಬದ್ಧತಾ ವೆಚ್ಚ ಮಿತಿಮೀರಿದ್ದರಿಂದ ಆರ್ಥಿಕ ಸ್ಥಿತಿ ಹದಗೆಟ್ಟಿತ್ತು. ರಾಜ್ಯದ ಆರ್ಥಿಕ ಪರಿಸ್ಥಿತಿ ಹಾಳು ಮಾಡಿದವರೇ ಈಗ ನಮ್ಮ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಅವರಿಗೆ ಯಾವ ನೈತಿಕತೆ ಇದೆ? ಎಂದು ಪ್ರಶ್ನಿಸಿದರು.

ರಾಜ್ಯದ ಬರಪರಿಸ್ಥಿತಿಯ ಅಧ್ಯಯನಕ್ಕಾಗಿ ಕೇಂದ್ರ ಬರ ಅಧ್ಯಯನ ತಂಡ ಆಗಮಿಸಿದೆ. ಕೇಂದ್ರದ ಅಧ್ಯಯನ ತಂಡಕ್ಕೆ ರಾಜ್ಯದಲ್ಲಿ ತಲೆದೋರಿರುವ ಬರಪರಿಸ್ಥಿತಿಯ ವಸ್ತುಸ್ಥಿತಿಯನ್ನು ಈಗಾಗಲೇ ವಿವರಿಸಲಾಗಿದೆ. ಒಟ್ಟು 236 ತಾಲ್ಲೂಕುಗಳಲ್ಲಿ 195 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಸುಮಾರು 30 ಸಾವಿರ ಕೋಟಿ ರೂ.ಗಳಿಗೂ ಹೆಚ್ಚಿನ ಬೆಳೆಹಾನಿ ಸಂಭವಿಸಿದೆ. 42 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಸುಮಾರು ಶೇ. 52 ರಷ್ಟು ಬೆಳೆಹಾನಿಯಾಗಿದೆ.

ಕೃಷ್ಣಾ ಮೇಲ್ದಂಡೆ ಹಾಗೂ ನಾರಾಯಣಪುರ ಜಲಾಶಯಗಳನ್ನು ಹೊರತುಪಡಿಸಿ, ಕಾವೇರಿ ಸೇರಿದಂತೆ ಇನ್ನುಳಿದ ಜಲಾನಯನ ಪ್ರದೇಶಗಳಲ್ಲಿ ನೀರಿನ ಸಂಗ್ರಹವಿಲ್ಲ. ಎನ್.ಡಿ.ಆರ್.ಎಫ್ ಮಾರ್ಗಸೂಚಿಯಂತೆ 4,860 ಕೋಟಿ ರೂ.ಗಳ ಪರಿಹಾರವನ್ನು ಕೇಂದ್ರದಿಂದ ಕೋರಲಾಗಿದೆ. ಈ ಬಾರಿ ಹಸಿರು ಬರ ಉಂಟಾಗಿದೆ. ಕೇಂದ್ರದ ಅಧ್ಯಯನ ತಂಡ ಮೂರು ತಂಡಗಳಲ್ಲಿ ರಾಜ್ಯದ 11 ಜಿಲ್ಲೆಗಳಿಗೆ ಭೇಟಿ ನೀಡುತ್ತಿದೆ. ಅವರು ಕೇಂದ್ರಕ್ಕೆ ವರದಿ ಸಲ್ಲಿಸಿದ ನಂತರ, ವರದಿ ಆಧರಿಸಿದಂತೆ ಕೇಂದ್ರ ಪರಿಹಾರ ನೀಡಲಿದೆ.

ಹಿಂದಿನ ರಾಜ್ಯ ಸರ್ಕಾರವು ಭದ್ರಾ ಮೇಲ್ದಂಡೆ ಯೋಜನೆಯನ್ನು ಕೇಂದ್ರ ಸರ್ಕಾರ ರಾಷ್ಟ್ರೀಯ ಯೋಜನೆಯೆಂದು ಘೋಷಿಸಿ, 5,300 ಕೋಟಿ ರೂ. ಬಿಡುಗಡೆ ಮಾಡಲಿದೆ ಎಂದಿದ್ದರು. ಆದರೆ ಇದುವರೆಗೆ ಕೇಂದ್ರದಿಂದ ಯಾವುದೇ ಹಣ ಬಿಡುಗಡೆಯಾಗಿಲ್ಲ. ಈ ಮೊತ್ತವನ್ನು ಆದಷ್ಟು ಬೇಗನೆ ಬಿಡುಗಡೆಗೊಳಿಸುವಂತೆ ಕೇಂದ್ರಕ್ಕೆ ಮತ್ತೊಮ್ಮೆ ಕೋರಲಾಗಿದೆ. ನಮ್ಮ ಸರ್ಕಾರವು ನೀರಾವರಿ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡುತ್ತದೆ. ಕೃಷ್ಣಾ ಮೇಲ್ದಂಡೆ ಯೋಜನೆಗೆ ವಿಶೇಷ ಪ್ರಾಧಾನ್ಯತೆ ನೀಡಲಾಗುವುದು. ಪ್ರಸಕ್ತ ವರ್ಷ ಹಾಗೂ ಮುಂದಿನ ವರ್ಷವೂ ಕೂಡ ಈ ಯೋಜನೆಗೆ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.

error: Content is protected !! Not allowed copy content from janadhvani.com