ಬೆಂಗಳೂರು: ದೀಪಾವಳಿಯ ಹೊತ್ತಿನಲ್ಲಿ ಬಿಜೆಪಿ ಹೈಕಮಾಂಡ್ ರಾಜ್ಯ ಬಿಜೆಪಿ ನಾಯಕರಿಗೆ ಹೊಸ ಗಿಫ್ಟ್ ನೀಡಿದೆ. ಶಿಕಾರಿಪುರ ಶಾಸಕ ಬಿವೈ ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಆಯ್ಕೆ ಮಾಡಿದೆ.
ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಹುದ್ದೆಗೆ ಬಿ.ವೈ.ವಿಜಯೇಂದ್ರ ಅವರನ್ನು ನಿಯೋಜಿಸಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಆದೇಶಿಸಿದ್ದಾರೆ.
ನಿಕಟಪೂರ್ವ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರ ಅವಧಿ ಎರಡು ವರ್ಷಗಳ ಹಿಂದೆ ಪೂರ್ಣಗೊಂಡಿತ್ತು. ನಂತರ ಪಕ್ಷದ ವರಿಷ್ಠರ ಸೂಚನೆಯಂತೆ ಅವರು ಹುದ್ದೆಯಲ್ಲಿ ಮುಂದುವರಿದಿದ್ದರು.
ಬಿಜೆಪಿ ಹೈಕಮಾಂಡ್ ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡುವ ಮೂಲಕ ಕರ್ನಾಟಕದಲ್ಲಿ ಯಡಿಯೂರಪ್ಪ ಅವರನ್ನು ಬಿಟ್ಟು ಪಕ್ಷ ಇರೋದಿಲ್ಲ ಎಂಬುವುದನ್ನು ಪರೋಕ್ಷವಾಗಿ ಒಪ್ಪಿಕೊಂಡಂತೆ ಇದೆ.ಲೋಕಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವ ಸಂದರ್ಭದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಅವರ ಪುತ್ರ, ಕರ್ನಾಟಕ ಬಿಜೆಪಿ ಉಪಾಧ್ಯಕ್ಷರಾಗಿದ್ದ ಬಿವೈ ವಿಜಯೇಂದ್ರ ಅವರನ್ನು ರಾಜ್ಯಾಕ್ಷರನ್ನಾಗಿ ಆಯ್ಕೆ ಮಾಡಿ ಲಿಂಗಾಯತ ಸಮುದಾಯ ನಾಯಕನಿಗೆ ಮಣೆ ಹಾಕಿದೆ.
2023ರ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಹೀನಾಯ ಸೋಲು ಮತ್ತು ಬರಲಿರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಪ್ರಭಾವವನ್ನು ರಾಜ್ಯದಲ್ಲಿ ಹೆಚ್ಚಿಸುವ ನಿಟ್ಟಿನಲ್ಲಿ ಸಮರ್ಥ ನಾಯಕರ ಹುಡುಕಾಟವನ್ನು ಪಕ್ಷ ನಡೆಸಿತ್ತು. ಶಿಕಾರಿಪುರ ಶಾಸಕರಾಗಿರುವ ವಿಜಯೇಂದ್ರ ಅವರ ಹೆಸರು ಅಧ್ಯಕ್ಷ ಹುದ್ದೆಗೆ ಕೇಳಿಬಂದಿತ್ತು. ಪಕ್ಷದ ರಾಜ್ಯಾಧ್ಯಕ್ಷರ ನೇಮಕ ಹಾಗೂ ವಿರೋಧ ಪಕ್ಷದ ನಾಯಕರ ನೇಮಕ ಮಾಡದ ಕುರಿತು ಪಕ್ಷದ ವಲಯದಲ್ಲಿ ಸಾಕಷ್ಟು ಚರ್ಚೆಯಾಗಿತ್ತು. ಕಾಂಗ್ರೆಸ್ ನಾಯಕರು ಬಿಜೆಪಿ ನಾಯಕರ ಕಾಲೆಳೆದಿದ್ದರು.