ಬೆಂಗಳೂರು: ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಅವರ ನಿವಾಸದಲ್ಲಿ ದೀಪಾವಳಿಯ ದೀಪಾಲಂಕಾರಕ್ಕೆ ಅಕ್ರಮ ವಿದ್ಯುತ್ ಸಂಪರ್ಕ ಪಡೆದಿರುವ ಬಗ್ಗೆ ಸಾಮಾಜಿಕ ತಾಣಗಳಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಒಬ್ಬ ಮಾಜಿ ಸಿಎಂ ಆಗಿ ವಿದ್ಯುತ್ ಕಳ್ಳತನ ಮಾಡುವ ದಾರಿದ್ರ್ಯ ಬಂದಿದ್ದು ದುರಂತ ಎಂದು ಎಕ್ಸ್‌ನಲ್ಲಿ ಕಾಂಗ್ರೆಸ್ ಪೋಸ್ಟ್ ಮಾಡಿ ಕಿಡಿಕಾರಿದೆ.
ಪೋಸ್ಟ್‌ನಲ್ಲಿ ಏನಿದೆ?
“ಜಗತ್ತಿನ ಏಕೈಕ ಮಹಾಪ್ರಾಮಾಣಿಕ ಹೆಚ್.ಡಿ ಕುಮಾರಸ್ವಾಮಿಯವರ ಜೆಪಿ ನಗರದ ನಿವಾಸದ ದೀಪಾವಳಿಯ ದೀಪಾಲಂಕಾರಕ್ಕೆ ನೇರವಾಗಿ ವಿದ್ಯುತ್ ಕಂಬದಿಂದ ಅಕ್ರಮ ವಿದ್ಯುತ್ ಸಂಪರ್ಕ ಪಡೆದಿದ್ದಾರೆ. ಒಬ್ಬ ಮಾಜಿ ಸಿಎಂ ಆಗಿ ವಿದ್ಯುತ್ ಕಳ್ಳತನ ಮಾಡುವ ದಾರಿದ್ರ್ಯ ಬಂದಿದ್ದು ದುರಂತ.”
“ಕುಮಾರಸ್ವಾಮಿ ಅವರೇ ನಮ್ಮ ಸರ್ಕಾರ ಗೃಹಜ್ಯೋತಿಯಲ್ಲಿ 200 ಯೂನಿಟ್ ಉಚಿತ ಕೊಡುತ್ತಿದೆಯೇ ಹೊರತು 2000 ಯೂನಿಟ್ ಅಲ್ಲ. ತಮಗೆ ಅಷ್ಟೊಂದು ದಾರಿದ್ರ್ಯ ಬಂದಿದ್ದರೆ ಗೃಹಜ್ಯೋತಿ ಯೋಜನೆಗೆ ಒಂದು ಅರ್ಜಿ ಹಾಕಬಹುದಿತ್ತಲ್ಲ. ಒಹ್, ತಿಳಿದಿರಲಿಲ್ಲ ಗೃಹಜ್ಯೋತಿಯಲ್ಲಿ ಒಬ್ಬರಿಗೆ ಒಂದೇ ಮೀಟರ್ ಗೆ ಅವಕಾಶವಿದೆ, ತಮ್ಮ ಹೆಸರಲ್ಲಿ ಹಲವು ಮೀಟರ್‌ಗಳಿವೆಯಲ್ಲವೇ!”
” ರಾಜ್ಯದ ವಿದ್ಯುತ್ ಕೊರತೆಯ ನಡುವೆಯೂ ರೈತರಿಗೆ 7 ಗಂಟೆ ವಿದ್ಯುತ್ ಕೊಡುವ ಕ್ರಮ ಕೈಗೊಂಡಿದ್ದರೂ ಪುಂಖಾನುಪುಂಕವಾಗಿ ಮಾತಾನಾಡುವ ತಾವು ಇಂತಹ ಚೀಪ್ ಕಳ್ಳತನಕ್ಕೆ ಇಳಿಯುವಷ್ಟು ʼಬರʼ ಎದುರಿಸುತ್ತಿದ್ದೀರಾ? ಅದೇನೋ ಪತ್ರಿಕಾಗೋಷ್ಠಿ ನಡೆಸಿ ʼಕರ್ನಾಟಕ ಕತ್ತಲಲ್ಲಿದೆ ಎನ್ನುತ್ತಾ ಬಡಬಡಿಸಿದ್ದಿರಲ್ಲವೇ, ಈಗ ಕದ್ದ ವಿದ್ಯುತ್ತಿನಲ್ಲಿ ನಿಮ್ಮ ಮನೆಗೆ ಬೆಳಕು ಮಾಡಿಕೊಂಡಿದ್ದೀರಿ. ನಿಮ್ಮ ಮನೆ ಹೀಗೆ ಜಗಮಗ ಹೊಳೆಯುತ್ತಿರುವಾಗ ಅದ್ಯಾವ ಬಾಯಲ್ಲಿ ಕರ್ನಾಟಕ ಕತ್ತಲಲ್ಲಿದೆ ಎನ್ನುವಿರಿ ಸ್ವಾಮಿ?”
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರತಿಕ್ರಿಯೆ
‘ಅಚಾತುರ್ಯವೋ, ಕಳ್ಳತನವೋ ಒಟ್ಟಿನಲ್ಲಿ ವಿದ್ಯುತ್ ಕಳ್ಳತನದ ಬಗ್ಗೆ ಕುಮಾರಸ್ವಾಮಿ ಅವರು ಒಪ್ಪಿಕೊಂಡು, ದಂಡ ಕಟ್ಟುತ್ತೇನೆ ಎಂದು ಹೇಳಿದ್ದಾರೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
‘ಕುಮಾರಸ್ವಾಮಿ ಅವರು ತಮ್ಮ ಮನೆಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಮಾಡಿಕೊಂಡಿದ್ದಾರೆ’ ಎಂದು ಕಾಂಗ್ರೆಸ್ ಪಕ್ಷದ ‘ಎಕ್ಸ್’ ಖಾತೆಯಲ್ಲಿ ಮಾಡಿರುವ ಆರೋಪ ಕುರಿತು ಮಾಧ್ಯಮಗಳ ಪ್ರಶ್ನೆಗಳಿಗೆ ವಿಧಾನಸೌಧ ಹಾಗೂ ಕೆಪಿಸಿಸಿ ಕಚೇರಿ ಬಳಿ ಅವರು ಪ್ರತಿಕ್ರಿಯಿಸಿದರು.
‘ಕುಮಾರಸ್ವಾಮಿ ಮನೆಗೆ ವಿದ್ಯುತ್ ಕಳವು ವಿಚಾರವನ್ನು ಮಾಧ್ಯಮಗಳಲ್ಲಿ ಗಮನಿಸಿದೆ. ಅವರ ನೆರೆಹೊರೆಯವರೇ ಅಕ್ರಮ ವಿದ್ಯುತ್ ಸಂಪರ್ಕದ ವಿಡಿಯೋ ಮಾಡಿ ಮಾಧ್ಯಮಗಳಿಗೆ ನೀಡಿದ್ದಾರೆ.
ಆನಂತರ ನಮ್ಮ ಪಕ್ಷದ ಸಾಮಾಜಿಕ ಜಾಲತಾಣ ಘಟಕ ಏನು ಕೆಲಸ ಮಾಡಬೇಕೊ ಅದನ್ನು ಮಾಡಿದೆ. ಅವರ ಪಕ್ಷದ ಸೋಶಿಯಲ್ ಮೀಡಿಯಾದಲ್ಲಿ ಬೇಕಾದಷ್ಟು ಬರೆದಂತೆ, ನಮ್ಮ ಪಕ್ಷದವರು ಏನು ಕೆಲಸ ಮಾಡಬೇಕೋ ಅದನ್ನು ಮಾಡಿದ್ದಾರೆ. ಅವರು ಮಾಡೋದನ್ನು ನೋಡಿಕೊಂಡು ಸುಮ್ಮನೆ ಕುಳಿತುಕೊಳ್ಳಲು ಆಗುತ್ತದೆಯೇ’ ಎಂದು ಮರುಪ್ರಶ್ನಿಸಿದರು.
ಕುಮಾರಸ್ವಾಮಿ ಅವರು ಈ ರೀತಿಯ ಕೆಲಸ ಮಾಡಿರುವುದು ತಪ್ಪಲ್ಲವೇ? ಎಂಬ ಪ್ರಶ್ನೆಗೆ, ‘ವಿದ್ಯುತ್ ಕಳ್ಳತನ ಮಾಡಬಾರದು. ಜವಾಬ್ದಾರಿಯುತ ಸ್ಥಾನದಲ್ಲಿ ಇರುವ ನಮ್ಮಂಥವರೇ ಹೀಗೆ ಮಾಡಿದರೆ ತಪ್ಪಲ್ಲವೇ? ಈ ವಿಚಾರವಾಗಿ ಸರ್ಕಾರ ಮಧ್ಯಪ್ರವೇಶ ಮಾಡುವುದಿಲ್ಲ. ನಮಗೆ ಅದರ ಅವಶ್ಯಕತೆಯೂ ಇಲ್ಲ. ಬೆಸ್ಕಾಂನವರು ಕ್ರಮ ತೆಗೆದುಕೊಳ್ಳುತ್ತಾರೆ’ ಎಂದರು.