janadhvani

Kannada Online News Paper

ರಾಜ್ಯದಲ್ಲಿ 75ನೇ ಗಣರಾಜ್ಯೋತ್ಸವದ ಸಂಭ್ರಮ- ಗ್ಯಾರಂಟಿ ಯೋಜನೆಗಳನ್ನು ಕೊಂಡಾಡಿದ ರಾಜ್ಯಪಾಲರು

ಐದು ಗ್ಯಾರಂಟಿ ಯೋಜನೆಗಳು ಅನುಷ್ಠಾನಗೊಂಡಿವೆ ಎನ್ನುವುದನ್ನು ನಿಮ್ಮ ಮುಂದೆ ಹೇಳಲು ಹೆಮ್ಮೆ ಪಡುತ್ತೇನೆ. ದೇಶದ ಯಾವುದೇ ರಾಜ್ಯ ಸರ್ಕಾರ ಕೂಡಾ ಇಂತಹದ್ದೊಂದ ಸಾಧನೆ ಮಾಡಿಲ್ಲ ಎನ್ನುವುದನ್ನು ವಿಶ್ವಾಸಪೂರ್ವಕವಾಗಿ ಹೇಳಬಲ್ಲೆ.

ಬೆಂಗಳೂರು: ರಾಜ್ಯದಲ್ಲಿ 75ನೇ ಗಣರಾಜ್ಯೋತ್ಸವದ ಸಂಭ್ರಮ ಜೋರಾಗಿದೆ. ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ ಅವರು ಧ್ವಜಾರೋಹಣ ನೆರವೇರಿಸಿದರು.

ಬೆಳಗ್ಗೆ 9 ಗಂಟೆಗೆ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಬಳಿಕ ಅವರು ಪೊಲೀಸ್ ತುಕಡಿಗಳಿಂದ ಗೌರವ ವಂದನೆ ಸ್ವೀಕಾರ ಮಾಡಿದರು.

ಬಳಿಕ ರಾಜ್ಯದ ಜನರನ್ನು ಉದ್ದೇಶಿಸಿ ಮಾತನಾಡಿದ ಅವರು, ನಾಡಿನ ಸಮಸ್ತ ಜನತೆಗೆ 75ನೇ ಗಣರಾಜ್ಯೋತ್ಸವದ ಶುಭಾಶಯಗಳು. ಇಂದು ಭಾರತಕ್ಕೆ ಐತಿಹಾಸಿಕ ದಿನವಾಗಿದೆ. ಸಂವಿಧಾನವು ಭಾರತದ ನಾಗರೀಕರಿಗೆ ನ್ಯಾಯ, ಸ್ವಾತಂತ್ರ್ಯ, ಹಾಗೂ ಸಮಾನತೆಯ ಅವಕಾಶವನ್ನ ಒದಗಿಸಿದೆ. ಸಮಗ್ರತೆ, ಏಕತೆಯನ್ನ ಕಾಪಾಡುವ ಜೊತೆಗೆ ಸ್ವಾಭಿಮಾನದ ಜೀವನ ಒದಗಿಸುವ ಧ್ಯೇಯವನ್ನ ಹೊಂದಿದೆ.

ವಚನ ಭಂಗಕ್ಕಿಂತ ದೊಡ್ಡ ದೇಶದ್ರೋಹ ಮತ್ತೊಂದಿಲ್ಲ ಎಂದು ನಾನು ಬಲವಾಗಿ ನಂಬಿದವನು. ಇದು ನಮ್ಮ ಪಕ್ಷದ ಬದ್ಧತೆ ಕೂಡಾ ಆಗಿದೆ. ಭರವಸೆಗಳನ್ನು ನೀಡಿ ಚುನಾವಣೆಯಲ್ಲಿ ಗೆದ್ದು ಬಂದಿರುವ ನಮಗೆ ಅದನ್ನು ಉಳಿಸಿಕೊಳ್ಳುವ ಜವಾಬ್ದಾರಿಯೂ ಇದೆ. ಇದನ್ನು ನಾವು ಮರೆತಿಲ್ಲ. ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿರುವ ಗ್ಯಾರಂಟಿ ಯೋಜನೆಗಳ ಭರವಸೆಯ ಈಡೇರಿಕೆಗೆ ಮೊದಲ ಸಚಿವ ಸಂಪುಟದಲ್ಲಿಯೇ ತಾತ್ವಿಕ ಅಂಗೀಕಾರ ಪಡೆದು ಜಾರಿ ಪ್ರಕ್ರಿಯೆಗೆ ಚಾಲನೆ ನೀಡಿದ್ದೆವು.

ಇದರ ಫಲವಾಗಿ ಇಂದು ಐದು ಗ್ಯಾರಂಟಿ ಯೋಜನೆಗಳು ಅನುಷ್ಠಾನಗೊಂಡಿವೆ ಎನ್ನುವುದನ್ನು ನಿಮ್ಮ ಮುಂದೆ ಹೇಳಲು ಹೆಮ್ಮೆ ಪಡುತ್ತೇನೆ. ದೇಶದ ಯಾವುದೇ ರಾಜ್ಯ ಸರ್ಕಾರ ಕೂಡಾ ಇಂತಹದ್ದೊಂದು ಸಾಧನೆ ಮಾಡಿಲ್ಲ ಎನ್ನುವುದನ್ನು ವಿಶ್ವಾಸಪೂರ್ವಕವಾಗಿ ಹೇಳಬಲ್ಲೆ. ಇದು ರಾಜ್ಯದ ಜನತೆ ನಮ್ಮ ಸರ್ಕಾರಕ್ಕೆ ಕೊಟ್ಟಿರುವ ಶಕ್ತಿ ಎನ್ನುವುದನ್ನು ನಾವು ಮರೆತಿಲ್ಲ.

ಭೀಕರ ಬರಗಾಲ ಹಿನ್ನೆಲೆ ಬರಪೀಡಿತ ತಾಲೂಕುಗಳನ್ನ ಘೋಷಿಸಲಾಗಿದೆ. 223 ತಾಲೂಕು ಬರ ಪೀಡಿತ ಎಂದು ಘೋಷಣೆ ಮಾಡಲಾಗಿದೆ. ಈ ಪೈಕಿ 196 ತೀವ್ರ ಬರಪೀಡಿತ ತಾಲೂಕುಗಳಿವೆ. ರಾಜ್ಯ ಸರ್ಕಾರ NDRFನಿಂದ ಅನುದಾನ ಕೋರಿದೆ. ಪ್ರತಿ ರೈತನ ಖಾತೆಗೆ 2 ಸಾವಿರ ರೂ. ಪರಿಹಾರ ಹಾಕಲಾಗುತ್ತೆ. ಮಧ್ಯಂತರ ಪರಿಹಾರ ಬಿಡುಗಡೆ ಮಾಡಲಾಗುತ್ತಿದೆ. ಮನ್ರೇಗಾ ಯೋಜನೆಯಡಿ ಕೆಲಸ ಒದಗಿಸಲಾಗಿದೆ. 63.13 ಲಕ್ಷ ಜನರಿಗೆ ಕೆಲಸವನ್ನ ಒದಗಿಸಲಾಗಿದೆ. 72.38 ಲಕ್ಷ ಮನೆಗಳಿಗೆ ಕುಡಿಯುವ ನೀರಿನ ಸಂಪರ್ಕ ಕಲ್ಪಿಸಲಾಗಿದೆ. ರಾಜ್ಯದಲ್ಲಿರುವ ಡಯಾಲಿಸಿಸ್ ಕೇಂದ್ರಗಳ ವಿಸ್ತರಣೆ ಮಾಡಲಾಗಿದೆ. 168 ಇದ್ದ ಡಯಾಲಿಸಿಸ್ ಕೇಂದ್ರ 219ಕ್ಕೆ ಹೆಚ್ಚಳವಾಗಿದೆ. ಆರೋಗ್ಯ ಕವಚ ಯೋಜನೆಯಡಿ ಹೊಸದಾಗಿ 262 ಆ್ಯಂಬುಲೆನ್ಸ್ಗಳು ಸೇರ್ಪಡೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ಸಮಸ್ಯೆ ನಿಯಂತ್ರಣಕ್ಕೆ ಪರಿಹಾರ ಕೈಗೊಳ್ಳಲಾಗಿದೆ. ಆಯ್ದ ಸ್ಥಳಗಳಲ್ಲಿ ಸುರಂಗ ರಸ್ತೆಗಳ ನಿರ್ಮಾಣಕ್ಕೆ ಯೋಜನೆ ಮಾಡಲಾಗಿದೆ. ಎಲ್ಲಾ ಶಾಲೆಗಳಲ್ಲಿ ಸಂವಿಧಾನ ಪೀಠಿಕೆ ಬೋಧನೆ, ಭಾರತ ಸಂವಿಧಾನ ಪೀಠಿಕೆ ಫೋಟೋ ಹಾಕಲು ಕ್ರಮ ಕೈಗೊಳ್ಳಲಾಗಿದೆ. ಪ. ಜಾತಿಯ 69,190 ವಿದ್ಯಾರ್ಥಿಗಳಿಗೆ 133.82 ಕೋಟಿ ರೂ. ಪ್ರೋತ್ಸಾಹ ಧನ ನೀಡಲಾಗಿದೆ. SC, ST ನಿರುದ್ಯೋಗಿಗಳಿಗೆ ಸ್ವಾವಲಂಬಿ ಸಾರಥಿ ಯೋಜನೆ ಜಾರಿಗೊಳಿಸಲಾಗಿದೆ ಎಂದು ಹೇಳಿದರು.

error: Content is protected !! Not allowed copy content from janadhvani.com