janadhvani

Kannada Online News Paper

ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ನಿಧನ- ಗಣ್ಯರಿಂದ ಸಂತಾಪ

ರಾಜಕೀಯ ಜೀವನದಲ್ಲಿ ಅವರು ಕರ್ನಾಟಕದ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ವಿಧಾನಸಭೆ ಸ್ಪೀಕರ್, ವಿದೇಶಾಂಗ ವ್ಯವಹಾರಗಳ ಸಚಿವ ಹಾಗೂ ಮಹಾರಾಷ್ಟ್ರದ ರಾಜ್ಯಪಾಲರಾಗಿ ಉನ್ನತ ಹುದ್ದೆಗಳನ್ನು ನಿಭಾಯಿಸಿದ್ದರು.

ಬೆಂಗಳೂರು: ಕರ್ನಾಟಕದ ಮಾಜಿ ಮುಖ್ಯಮಂತ್ರಿ, ದೇಶದ ಹಿರಿಯ ರಾಜಕಾರಣಿಗಳಲ್ಲಿ ಒಬ್ಬರಾದ ಎಸ್‌.ಎಂ ಕೃಷ್ಣ ಅವರು ಬೆಂಗಳೂರಿನ ಸದಾಶಿವನಗರದ ತಮ್ಮ ಮನೆಯಲ್ಲಿ ಇಂದು (ಡಿ.10) ನಿಧನರಾಗಿದ್ದಾರೆ.

ಮಾಜಿ ರಾಜ್ಯಪಾಲ, ಕೇಂದ್ರದ ಮಾಜಿ ಸಚಿವರೂ ಆಗಿದ್ದ ಎಸ್‌.ಎಂ ಕೃಷ್ಣ ಅವರಿಗೆ 93 ವರ್ಷ ವಯಸ್ಸಾಗಿತ್ತು. ಅವರು ಕಳೆದ 6 ತಿಂಗಳಿನಿಂದ ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದರು. ಇತ್ತೀಚೆಗೆ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದರು. ಇಂದು ಬೆಳಗಿನ ಜಾವ 2.30 ಸುಮಾರಿಗೆ ವಿಧಿವಶರಾಗಿದ್ದಾರೆ.

ಎಸ್‌.ಎಂ ಕೃಷ್ಣ ಮೂಲತಃ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿ ಗ್ರಾಮದವರು. ಎಸ್.ಸಿ ಮಲ್ಲಯ್ಯ ಮತ್ತು ತಾಯಮ್ಮ ದಂಪತಿಯ ಪುತ್ರನಾಗಿ ಮೇ 1, 1932ರಲ್ಲಿ ಜನಿಸಿದ್ದರು.

ರಾಜಕೀಯ ಜೀವನದಲ್ಲಿ ಅವರು ಕರ್ನಾಟಕದ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ವಿಧಾನಸಭೆ ಸ್ಪೀಕರ್, ವಿದೇಶಾಂಗ ವ್ಯವಹಾರಗಳ ಸಚಿವ ಹಾಗೂ ಮಹಾರಾಷ್ಟ್ರದ ರಾಜ್ಯಪಾಲರಾಗಿ ಉನ್ನತ ಹುದ್ದೆಗಳನ್ನು ನಿಭಾಯಿಸಿದ್ದರು.

ಇವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌, ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ, ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

‘ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ರಾಜ್ಯ ಮತ್ತು ಕೇಂದ್ರ ಸಚಿವರಾಗಿ ಹಾಗೂ ಮುಖ್ಯಮಂತ್ರಿಯಾಗಿ ಕೃಷ್ಣ ಅವರು ಸಲ್ಲಿಸಿರುವ ಸೇವೆ ಅನುಪಮವಾದುದು. ವಿಶೇಷವಾಗಿ ಮುಖ್ಯಮಂತ್ರಿಯಾಗಿ ಐಟಿ-ಬಿಟಿ ಕ್ಷೇತ್ರದ ಬೆಳವಣಿಗೆಗೆ ಅವರು ನೀಡಿರುವ ಕೊಡುಗೆಗಾಗಿ ಕರ್ನಾಟಕ ಸದಾ ಋಣಿಯಾಗಿರುತ್ತದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

‘ಮುತ್ಸದ್ದಿ ರಾಜಕಾರಣಿಯಾಗಿದ್ದ ಕೃಷ್ಣ ಅವರು ಅಜಾತಶತ್ರುಗಳಾಗಿದ್ದರು. ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಪ್ರಾರಂಭದ ದಿನಗಳಲ್ಲಿ‌ ನನಗೆ ಮಾರ್ಗದರ್ಶಕರಾಗಿದ್ದ ಕೃಷ್ಣ ಅವರು ಸದಾ ನನ್ನ ಹಿತೈಷಿಗಳಾಗಿದ್ದರು.ಕೃಷ್ಣ ಅವರ ದೂರದರ್ಶಿತ್ವ, ಶಿಸ್ತುಬದ್ಧ ಜೀವನ, ಸಜ್ಜನಿಕೆಯ ನಡವಳಿಕೆ ಮತ್ತು ಅಧ್ಯಯನಶೀಲ ಪ್ರವೃತ್ತಿ ಉದಯೋನ್ಮಖ ರಾಜಕಾರಣಿಗಳಿಗೆ ಮಾದರಿಯಾಗಿದೆ. ಅವರ ಅಗಲಿಕೆಯಿಂದ ನೊಂದಿರುವ ಅವರ ಕುಟುಂಬವರ್ಗ ಮತ್ತು ಅಭಿಮಾನಿಗಳ ದು:ಖದಲ್ಲಿ‌ ನಾನೂ ಭಾಗಿಯಾಗಿದ್ದೇನೆ.‌ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಭಗವಂತನಲ್ಲಿ ಕೋರುತ್ತೇನೆ’ ಎಂದು ಸಿಎಂ ಹೇಳಿದ್ದಾರೆ.

‘ ರಾಜ್ಯದ ವಿಧಾನಸಭಾಧ್ಯಕ್ಷರು, ಉಪ ಮುಖ್ಯಮಂತ್ರಿಗಳು, ಮುಖ್ಯಮಂತ್ರಿಗಳು, ಕೇಂದ್ರ ಸಚಿವರು, ರಾಜ್ಯಪಾಲರೂ ಸೇರಿದಂತೆ ಅನೇಕ ಉನ್ನತ ಹುದ್ದೆಗಳಲ್ಲಿ ದಕ್ಷತೆಯಿಂದ ಕರ್ತವ್ಯ ನಿರ್ವಹಿಸಿ ರಾಜ್ಯಕ್ಕೆ, ದೇಶಕ್ಕೆ ತಮ್ಮದೇ ಆದ ಅನುಪಮ ಕೊಡುಗೆ ನೀಡಿದ್ದ ಹಿರಿಯರು, ಮುತ್ಸದ್ದಿಗಳಾದ ಎಸ್.ಎಂ.ಕೃಷ್ಣ ಅವರ ನಿಧನದ ಸುದ್ದಿ ಕೇಳಿ ಬಹಳ ದುಃಖವುಂಟಾಯಿತು. ವೈಯಕ್ತಿಕವಾಗಿ ನನಗೆ ಅವರ ಅಗಲಿಕೆ ಬಹಳ ದುಃಖ ಉಂಟು ಮಾಡಿದೆ. ಆ ಚೇತನಕ್ಕೆ ಚಿರಶಾಂತಿ ಸಿಗಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ, ಅಭಿಮಾನಿಗಳಿಗೆ, ರಾಜ್ಯದ ಜನತೆಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

error: Content is protected !! Not allowed copy content from janadhvani.com