ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ನಿಧನದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮೂರು ದಿನಗಳ ಶೋಕಾಚರಣೆಯನ್ನು ಘೋಷಿಸಿದೆ.
‘ಶೋಕಾಚರಣೆ ಸಮಯದಲ್ಲಿ ಸಾರ್ವಜನಿಕ ಮನೋರಂಜನಾ ಕಾರ್ಯಕ್ರಮಗಳನ್ನು ನಿಷೇಧಿಸಲಾಗಿದೆ. ನಿಯತವಾಗಿ ರಾಜ್ಯ ಸರ್ಕಾರದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರ ಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸಲಾಗುವುದು’ ಎಂದು ರಾಜ್ಯ ಸರ್ಕಾರದ ಪ್ರಕಟಣೆಯಲ್ಲಿ ತಿಳಿಸಿದೆ.
‘ಮೃತರ ಅಂತ್ಯಕ್ರಿಯೆಯನ್ನು ಬುಧವಾರ ಅವರ ಹುಟ್ಟುರಾದ ಮಂಡ್ಯ ಜಿಲ್ಲೆಯಲ್ಲಿ ಸಕಲ ಸರ್ಕಾರಿ ಗೌವರಗಳೊಂದಿಗೆ ನೆರವೇರಿಸಲಾಗುತ್ತದೆ’ ಎಂದು ತಿಳಿಸಿದೆ.
ಎಸ್. ಎಂ. ಕೃಷ್ಣ ಅವರು ಸದಾಶಿವನಗರದ ಸ್ವಗೃಹದಲ್ಲಿ ಇಂದು(ಮಂಗಳವಾರ) ಬೆಳಗಿನ ಜಾವ 2.30 ರ ಸುಮಾರಿಗೆ ನಿಧನರಾದರು. ಅವರಿಗೆ 93 ವರ್ಷ ವಯಸ್ಸಾಗಿತ್ತು.
ಎಸ್.ಎಂ.ಕೃಷ್ಣ ಅವರ ನಿಧನದ ಹಿನ್ನೆಲೆಯಲ್ಲಿ ನಾಳೆ(ಬುಧವಾರ) ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಕಚೇರಿಗಳು, ಶಾಲಾ ಕಾಲೇಜುಗಳಿಗೆ (ಅನುದಾನಿತ ವಿದ್ಯಾ ಸಂಸ್ಥೆಗಳು ಸೇರಿದಂತೆ) ಸಾರ್ವಜನಿಕ ರಜೆಯನ್ನು ಘೋಷಿಸಲಾಗಿದೆ.