janadhvani

Kannada Online News Paper

ಪಕ್ಷದ ಶಿಸ್ತು ಉಲ್ಲಂಘನೆ: ಬಸನಗೌಡ ಪಾಟೀಲ ಯತ್ನಾಳ ಬಿಜೆಪಿಯಿಂದ ಔಟ್

ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ವಿರುದ್ಧ ಬಹಿರಂಗವಾಗಿಯೇ ವಾಗ್ದಾಳಿ ನಡೆಸುತ್ತಿದ್ದ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕೊನೆಗೂ ಹೈಕಮಾಂಡ್ ಕ್ರಮ ಕೈಗೊಂಡಿದೆ.

ನವದೆಹಲಿ: ಪಕ್ಷದ ಶಿಸ್ತು ಉಲ್ಲಂಘನೆ ಮಾಡಿದ ಆರೋಪದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರನ್ನು ಆರು ವರ್ಷಗಳ ಅವಧಿಗೆ ಪಕ್ಷದಿಂದ ಉಚ್ಚಾಟಿಸಲಾಗಿದೆ. ಈ ವಿಷಯವನ್ನು ಕೇಂದ್ರ ಶಿಸ್ತು ಸಮಿತಿ ಕಾರ್ಯದರ್ಶಿ ಓಂಪಾಠಕ್ ಖಚಿತಪಡಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಅವರ ಪುತ್ರ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ವಿರುದ್ಧ ಬಹಿರಂಗವಾಗಿಯೇ ವಾಗ್ದಾಳಿ ನಡೆಸುತ್ತಿದ್ದ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕೊನೆಗೂ ಹೈಕಮಾಂಡ್ ಕ್ರಮ ಕೈಗೊಂಡಿದೆ.

ಯತ್ನಾಳ್ ಅವರನ್ನು ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಿ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ಬುಧವಾರ ಆದೇಶ ಹೊರಡಿಸಿದೆ. ಈ ಮೂಲಕ ರಾಜ್ಯ ಬಿಜೆಪಿಯಲ್ಲಿನ ಬಣಬಡಿದಾಟಕ್ಕೆ ಕೊನೆಗೂ ಹೈಕಮಾಂಡ್ ಬ್ರೇಕ್ ಹಾಕಿದೆ.

ಪಕ್ಷದ ಕೇಂದ್ರ ಶಿಸ್ತು ಸಮಿತಿಯು 2025 ಫೆಬ್ರವರಿ 10 ರಂದು ನೀಡಿದ್ದ ಶೋಕಾಸ್ ನೋಟಿಸ್‌ಗೆ ನಿಮ್ಮ ಪ್ರತಿಕ್ರಿಯೆಯನ್ನು ಪರಿಗಣಿಸಿದೆ ಮತ್ತು ಹಿಂದಿನ ಶೋಕಾಸ್ ನೋಟಿಸ್‌ಗಳಿಗೆ ಪ್ರತಿಕ್ರಿಯೆಯಾಗಿ ಉತ್ತಮ ನಡವಳಿಕೆಯ ಭರವಸೆಗಳನ್ನು ನೀಡಿದ್ದರೂ ಸಹ, ನೀವು ಪಕ್ಷದ ಶಿಸ್ತನ್ನು ಪದೇ ಪದೇ ಉಲ್ಲಂಘಿಸುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿದೆ. ಆದ್ದರಿಂದ, ನಿಮ್ಮನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ತಕ್ಷಣದಿಂದ ಜಾರಿಗೆ ಬರುವಂತೆ 6 ವರ್ಷಗಳ ಅವಧಿಗೆ ಉಚ್ಚಾಟಿಸಲು ನಿರ್ಧರಿಸಲಾಗಿದೆ ಎಂದು ಕೇಂದ್ರ ಶಿಸ್ತು ಸಮಿತಿ ಆದೇಶದಲ್ಲಿ ತಿಳಿಸಲಾಗಿದೆ.