ಅಬುಧಾಬಿ: ಇರಾನ್‌ನ ಪರಮಾಣು ಸೌಲಭ್ಯಗಳ ಮೇಲೆ ಅಮೆರಿಕ ನಡೆಸಿದ ದಾಳಿಗೆ ಪ್ರತೀಕಾರವಾಗಿ ಇರಾನ್ ದೋಹಾದಲ್ಲಿರುವ ಅಮೆರಿಕದ ಸೇನಾ ನೆಲೆಯ ಮೇಲೆ ದಾಳಿ ನಡೆಸಿದೆ. ಇದಕ್ಕೂ ಮುನ್ನ ಕತಾರ್ ತನ್ನ ವಾಯುಪ್ರದೇಶವನ್ನು ಮುಚ್ಚಿದೆ. ವಾಯುಪ್ರದೇಶವನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಈ ಪ್ರದೇಶದ ಪ್ರಸ್ತುತ ಪರಿಸ್ಥಿತಿಯನ್ನು ಪರಿಗಣಿಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಕತಾರ್ ವಿದೇಶಾಂಗ ಸಚಿವಾಲಯ ತಿಳಿಸಿದೆ.
ಏತನ್ಮಧ್ಯೆ, ಯುಎಇ, ಸೌದಿ ಅರೇಬಿಯಾ, ಬಹರೈನ್, ಕುವೈತ್ ಸೇರಿದಂತೆ ಗಲ್ಫ್ ರಾಷ್ಟ್ರಗಳು ತಮ್ಮ ವಾಯು ಪ್ರದೇಶವನ್ನು ತಾತ್ಕಾಲಿಕವಾಗಿ ಮುಚ್ಚಿದೆ. ಇದು ಭಾರತದಿಂದ ಸಹಿತವಿರುವ ವಿಮಾನಯಾನ ಸೇವೆಗಳಿಗೆ ಅಡಚಣೆಯಾಗಿದೆ. ಈ ಪ್ರದೇಶಗಳಿಗೆ ಮತ್ತು ಅಲ್ಲಿಂದ ಹಾರಾಟ ನಡೆಸುವ ವಿಮಾನಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ವಿಮಾನ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ಭಾರತದ ಮತ್ತು ಗಲ್ಫ್ ರಾಷ್ಟ್ರಗಳ ವಿವಿಧ ವಿಮಾನ ನಿಲ್ದಾಣಗಳಲ್ಲಿ ಯಾತ್ರಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಇದರಿಂದಾಗಿ ರಾಜ್ಯದ ಮಂಗಳೂರು ಮತ್ತು ಬೆಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿಮಾನ ಕಾರ್ಯಾಚರಣೆಗಳ ಮೇಲೆ ಪರಿಣಾಮ ಬೀರಿದೆ. ಮಂಗಳೂರಿನಿಂದ ದಮಾಮ್‌ಗೆ ಹೋಗುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನವನ್ನು ಮಸ್ಕತ್‌ಗೆ ತಿರುಗಿಸಲಾಗಿದೆ. ಅಬುಧಾಬಿಗೆ ತೆರಳುತ್ತಿದ್ದ ಇಂಡಿಗೋ ವಿಮಾನವನ್ನು ಮುಂಬೈನಲ್ಲಿ ಇಳಿಸಲಾಯಿತು ಎಂದು ಮೂಲಗಳು ತಿಳಿಸಿವೆ.
ದಮಾಮ್ ಗೆ ಹೋಗುತ್ತಿದ್ದ ವಿಮಾನವನ್ನು ಮಸ್ಕತ್ ನಲ್ಲಿ ಇಳಿಸಲಾಗಿದ್ದು ಪ್ರಯಾಣಿಕರು ವಿಮಾನದಲ್ಲೇ ಉಳಿದಿದ್ದಾರೆ. ಅವರಿಗೆ ವಿಮಾನದಿಂದ ಇಳಿಯಲು ಅನುಮತಿ ಸಿಕ್ಕಿಲ್ಲ. ಅನುಮತಿ ಸಿಕ್ಕಿದರೆ ಅಲ್ಲಿ ಪ್ರಯಾಣಿಕರನ್ನು ಇಳಿಸಲಾಗುವುದು, ಇಲ್ಲದಿದ್ದರೆ ಇಂಧನ ತುಂಬಿಸಿ ವಿಮಾನ ಮಂಗಳೂರಿಗೆ ವಾಪಸ್ ಬರುವ ಸಾಧ್ಯತೆಯಿದೆ ಎಂದು ವಿಮಾನದಲ್ಲಿರುವ ಪ್ರಯಾಣಿಕರೊಬ್ಬರು ತಿಳಿಸಿದ್ದಾಗಿ ಮಾಹಿತಿ ಲಭಿಸಿದೆ.
ಪ್ರಯಾಣಿಕರು ವಿಮಾನ ನಿಲ್ದಾಣಕ್ಕೆ ಬರುವ ಮೊದಲು ತಮ್ಮ ವಿಮಾನಗಳ ಸ್ಥಿತಿಯ ಕುರಿತು ಆಯಾ ವಿಮಾನಯಾನ ಸಂಸ್ಥೆಗಳನ್ನು ಸಂಪರ್ಕಿಸುವಂತೆ ಸೂಚಿಸಲಾಗಿದೆ.
ಮಧ್ಯಪ್ರಾಚ್ಯದಲ್ಲಿರುವ ಅಮೆರಿಕದ ಸೇನಾ ನೆಲೆಗಳ ಮೇಲೆ ದಾಳಿ ಮಾಡಲು ಇರಾನ್ ಸಿದ್ಧತೆ ನಡೆಸುತ್ತಿದೆ ಮತ್ತು ಈ ಉದ್ದೇಶಕ್ಕಾಗಿ ಕ್ಷಿಪಣಿ ಉಡಾವಣಾ ಯಂತ್ರಗಳನ್ನು ಸಿದ್ಧಪಡಿಸುತ್ತಿದೆ ಎಂಬ ವರದಿಗಳು ಬಂದಿತ್ತು.