janadhvani

Kannada Online News Paper

ಬಜೆಟ್ ನಲ್ಲಿ ಏರಿಸಿದ ಪೆಟ್ರೋಲ್-ಡೀಸೆಲ್ ಮೇಲಿನ ತೆರಿಗೆ ಇಳಿಸಲು ಸಿಎಂ ನಿರ್ಧಾರ

ಬೆಂಗಳೂರು, ಜು.8- ವಿದ್ಯುತ್ ದರ ಹೆಚ್ಚಳ, ಪೆಟ್ರೋಲ್-ಡೀಸೆಲ್ ಮೇಲಿನ ತೆರಿಗೆ ಭಾರ ವಿಧಿಸಿ ಮಿತ್ರ ಪಕ್ಷ ಕಾಂಗ್ರೆಸ್ ಸೇರಿದಂತೆ ಸಾರ್ವಜನಿಕ ಟೀಕೆಗೆ ಗುರಿಯಾಗಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಬಜೆಟ್ ಮೇಲೆ ನಡೆಯುವ ಚರ್ಚೆಗೆ ಉತ್ತರಿಸುವ ಸಂದರ್ಭದಲ್ಲಿ ತೆರಿಗೆ ಇಳಿಕೆ ಮಾಡಲು ನಿರ್ಧರಿಸಿದ್ದಾರೆ.

ಬಜೆಟ್‌ನಲ್ಲಿ ತಾರತಮ್ಯ ಮಾಡಲಾಗಿದೆ ಎಂದು ಕಾಂಗ್ರೆಸ್ ಶಾಸಕರು ಸಿಡಿದೆದ್ದಿರುವ ಬಗ್ಗೆ ಎಚ್ಚೆತ್ತುಕೊಂಡಿರುವ ಕುಮಾರಸ್ವಾಮಿಯವರು ಪ್ರಾದೇಶಿಕ ತಾರತಮ್ಯ ನಿವಾರಿಸಿ ತೆರಿಗೆ ದರವನ್ನು ಕಡಿಮೆ ಮಾಡಲಿದ್ದಾರೆ ಎಂದು ಮುಖ್ಯಮಂತ್ರಿಗಳ ಆಪ್ತ ಮೂಲಗಳು ತಿಳಿಸಿವೆ.

ವಿಧಾನಸಭೆಯಲ್ಲಿ ಬಜೆಟ್ ಅಂಗೀಕಾರ ಸಂದರ್ಭದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಇಂಧನ ಸೆಸ್ ಕೈಬಿಡುವ ಬಗ್ಗೆ ಪ್ರಕಟಿಸುವ ಸಾಧ್ಯತೆಗಳು ಹೆಚ್ಚಿವೆ. ಇದರ ಜತೆಗೆ ಪ್ರಾದೇಶಿಕವಾಗಿ ಬಜೆಟ್‌ನಲ್ಲಿ ಆಗಿರುವ ಅಸಮತೋಲನವನ್ನು ಸರಿಪಡಿಸಲು ಉತ್ತರ ಕರ್ನಾಟಕ, ಕರಾವಳಿ ಭಾಗಗಳಿಗೆ ಹೆಚ್ಚಿನ ಅನುದಾನ ಒದಗಿಸುವ ಘೋಷಣೆಯನ್ನು ಮಾಡಲಿದ್ದಾರೆ ಎಂದು ಅವರ ಆಪ್ತ ಮೂಲಗಳು ಹೇಳಿವೆ.

ರೈತರ 34 ಸಾವಿರ ಕೋಟಿ ರೂ. ಬೆಳೆ ಸಾಲದ ಮನ್ನಾಕ್ಕಾಗಿ ಹಣ ಹೊಂದಾಣಿಕೆ ಮಾಡಲು ಮುಖ್ಯಮಂತ್ರಿ ಕುಮಾರಸ್ವಾಮಿ ಬಜೆಟ್‌ನಲ್ಲಿ ಇಂಧನದ ಮೇಲೆ ಸೆಸ್‌ ಹಾಕಿದ್ದರು. ಮದ್ಯದ ಮೇಲೂ ಶೇ. 4ರಷ್ಟು ತೆರಿಗೆ ಹೆಚ್ಚಳ ಮಾಡಿದ್ದರು.

ಇದು ವಿರೋಧ ಪಕ್ಷವಾದ ಬಿಜೆಪಿಯ ಕೆಂಗಣ್ಣಿಗೆ ಗುರಿಯಾಗಿತ್ತು. ಜತೆಗೆ ಕಾಂಗ್ರೆಸ್ ಪಕ್ಷದಲ್ಲೂ ಅಸಮಾಧಾನಕ್ಕೆ ಎಡೆಮಾಡಿಕೊಟ್ಟಿತ್ತು. ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್ ಪಕ್ಷ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಖಂಡಿಸಿ ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಹೋರಾಟ ನಡೆಸುತ್ತಿರುವಾಗ ಕಾಂಗ್ರೆಸ್ ಸರ್ಕಾರವಿರುವ ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸಲ್ ಬೆಲೆ ಏರಿಕೆ ಮಾಡಿದರೆ ರಾಷ್ಟ್ರಮಟ್ಟದಲ್ಲಿ ಪಕ್ಷಕ್ಕೆ ಒಡೆತ ಬೀಳುತ್ತದೆ ಎಂಬ ಮಾತುಗಳು ಕಾಂಗ್ರೆಸ್ ವಲಯದಿಂದ ಕೇಳಿ ಬಂದಿದ್ದವು. ಜತೆಗೆ ಈ ವಿಚಾರವನ್ನು ಮುಂದಿಟ್ಟುಕೊಂಡು ಬಿಜೆಪಿ ಸದನ ಒಳಗೂ, ಹೊರಗೂ ಹೋರಾಟ ನಡೆಸಲು ತೀರ್ಮಾನಿಸಿತ್ತು.

ಈ ದರ ಹೆಚ್ಚಳ ಬಿಜೆಪಿಗೆ ಲಾಭ ತಂದುಕೊಡಲಿದೆ. ಜತೆಗೆ ಸಮ್ಮಿಶ್ರ ಸರ್ಕಾರದ ಬಗ್ಗೆ ಜನರಲ್ಲಿ ನಕಾರಾತ್ಮಕ ಭಾವನೆ ಮೂಡಿ ಸರ್ಕಾರದ ವರ್ಚಸ್ಸಿಗೂ ಧಕ್ಕೆಯಾಗುತ್ತದೆ ಎಂಬ ಆತಂಕಗಳು ವ್ಯಕ್ತವಾಗಿದ್ದವು. ಈ ಎಲ್ಲ ಅಂಶಗಳನ್ನು ಗಣನೆಗೆ ತೆಗೆದುಕೊಂಡಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ಇಂಧನದ ಮೇಲಿನ ಸೆಸ್ ಕೈಬಿಡುವ ಸಾಧ್ಯತೆಗಳು ಹೆಚ್ಚಿವೆ.

ಸಮನ್ವಯ ಸಮಿತಿ ಸಭೆಯಲ್ಲಿ ಸಾಲಮನ್ನಾಗೆ ಕಾಂಗ್ರೆಸ್ ಒಪ್ಪಿಗೆ ನೀಡಿತ್ತು. ಆದರೆ, ಶ್ರೀಸಾಮಾನ್ಯನಿಗೆ ಹೊರೆಯಾಗದಂತೆ ಹಣಕಾಸು ಹೊಂದಾಣಿಕೆ ಮಾಡಬೇಕು ಎಂದು ಸಭೆಯಲ್ಲಿ ಮುಖ್ಯಮಂತ್ರಿಗಳಿಗೆ ಹೇಳಲಾಗಿತ್ತು. ಇಂಧನ ಬೆಲೆ ಏರಿಕೆಯ ಬಗ್ಗೆ ಯಾವುದೇ ಸುಳಿವು ನೀಡದೆ ಏಕಾಏಕಿ ಬಜೆಟ್‌ನಲ್ಲಿ ಈ ಬಗ್ಗೆ ಪ್ರಸ್ತಾಪ ಮಾ‌ಡಿದ್ದು, ಕಾಂಗ್ರೆಸ್ ನಾಯಕರ ಅಸಮಾಧಾನಕ್ಕೆ ಕಾರಣವಾಗಿ ಹಿರಿಯ ಶಾಸಕ ಎಸ್.ಕೆ ಪಾಟೀಲ್ ಬಜೆಟ್ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿ, ಸಮನ್ವಯ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ ವೇಣುಗೋಪಾಲ್ ಇವರಿಗೆ ಪತ್ರ ಬರೆದು ಸಮನ್ವಯ ಸಮಿತಿ ಸಭೆ ಕರೆದು ಚರ್ಚೆ ನಡೆಸಿ ಆಗಿರುವ ಲೋಪವನ್ನು ಸರಿಪಡಿಸುವಂತೆ ಆಗ್ರಹಿಸಿದ್ದರು. ಇದರ ಜತೆಗೆ ಬಜೆಟ್‌ನಲ್ಲಿ ಪ್ರಾದೇಶಿಕ ಅಸಮತೋಲನದ ಬಗ್ಗೆಯೂ ಪ್ರಸ್ತಾಪಿಸಿದ್ದರು.

ಇದರ ಬೆನ್ನಲ್ಲೆ ಕಾಂಗ್ರೆಸ್‌ನ ಹಲವು ಶಾಸಕರು ಶಾಸಕಾಂಗ ಪಕ್ಷ ಸಭೆ ಕರೆಯುವಂತೆಯೂ ಒತ್ತಡ ಹೇರಿದ್ದರು. ಕಾಂಗ್ರೆಸ್‌ನಲ್ಲಿ ಬಜೆಟ್ ಸಂಬಂಧ ನಡೆದ ಬೆಳವಣಿಗೆಗಳಿಂದ ಎಚ್ಚೆತ್ತ ಕಾಂಗ್ರೆಸ್ ನಾಯಕರು ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಜತೆ ಈ ಬಗ್ಗೆ ಔಪಚಾರಿಕವಾಗಿ ಚರ್ಚೆ ಸಹ ನಡೆಸಿದ್ದರು.

ಈ ಚರ್ಚೆಯ ಫಲಶ್ರುತಿ ಎಂಬಂತೆ ಮುಖ್ಯಮಂತ್ರಿ ಕುಮಾರಸ್ವಾಮಿ ಇಂಧನ ಸೆಸ್ ಇಳಿಕೆ ಸಂಬಂಧ ಸೂಕ್ತ ತೀರ್ಮಾನ ಕೈಗೊಳ್ಳುವ ಭರವಸೆ ನೀಡಿದ್ದರು. ಅದರಂತೆ ಇಂಧನ ಮೇಲಿನ ಸೆಸ್ ಇಳಿಕೆಗೂ ಅವರು ಮನಸ್ಸು ಮಾಡಿದ್ದಾರೆ ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ.

error: Content is protected !! Not allowed copy content from janadhvani.com