ಮದೀನಾ: ಸೌದಿ ಅರೇಬಿಯಾದ ಪವಿತ್ರ ನಗರವಾದ ಮದೀನಾದಲ್ಲಿ ಅಘಾತಕಾರಿ ಘಟನೆಯೊಂದು ನಡೆದಿದ್ದು, ಮನೆಯಲ್ಲಿದ್ದ ಮಗುವನ್ನು ಹತ್ಯೆಗೈದ ಆರೋಪದ ಮೇಲೆ ಫಿಲಿಪೈನ್ಸ್ ಮೂಲದ ಗೃಹ ಕಾರ್ಮಿಕಳನ್ನು ಪೊಲೀಸರು ಬಂಧಿಸಿದ್ದಾರೆ.
ಮದೀನಾ ಪ್ರಾಂತ್ಯದ ಮನೆಯೊಂದರಲ್ಲಿ ಕೆಲಸಕ್ಕಿದ್ದ ಈ ಮಹಿಳೆಯು, ತಾನು ಆರೈಕೆ ಮಾಡುತ್ತಿದ್ದ ಮಗುವಿನ ಮೇಲೆ ಹರಿತವಾದ ಆಯುಧದಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದಾಳೆ ಎಂದು ತಿಳಿದುಬಂದಿದೆ. ಘಟನೆಯ ಮಾಹಿತಿ ಲಭ್ಯವಾಗುತ್ತಿದ್ದಂತೆ ಕಾರ್ಯಪ್ರವೃತ್ತರಾದ ಮದೀನಾ ಪೊಲೀಸರು ಸ್ಥಳಕ್ಕೆ ಧಾವಿಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
ಬಂಧಿತ ಮಹಿಳೆಯನ್ನು ಪ್ರಾಥಮಿಕ ವಿಚಾರಣೆಯ ನಂತರ ಹೆಚ್ಚಿನ ಕಾನೂನು ಪ್ರಕ್ರಿಯೆಗಳಿಗಾಗಿ ಸಂಬಂಧಪಟ್ಟ ಇಲಾಖೆಗೆ ಹಸ್ತಾಂತರಿಸಲಾಗಿದೆ. ಕೊಲೆಗೆ ನಿಖರವಾದ ಕಾರಣವೇನು ಎಂಬುದು ಇನ್ನು ತಿಳಿದುಬಂದಿಲ್ಲ. ಸೌದಿ ಅರೇಬಿಯಾದ ಕಠಿಣ ಕಾನೂನಿನ ಅನ್ವಯ ಈ ಪ್ರಕರಣದ ತನಿಖೆ ನಡೆಯುತ್ತಿದ್ದು, ಶೀಘ್ರದಲ್ಲೇ ನ್ಯಾಯಾಲಯಕ್ಕೆ ವರದಿ ಸಲ್ಲಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಘಟನೆಯು ಸ್ಥಳೀಯರಲ್ಲಿ ಮತ್ತು ಪ್ರವಾಸಿ ಸಮುದಾಯದಲ್ಲಿ ತೀವ್ರ ಆತಂಕವನ್ನು ಮೂಡಿಸಿದೆ.






