ಮಂಗಳೂರು: ಭಾರಿ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವುದರಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶನಿವಾರ ಎಲ್ಲ ಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಶುಕ್ರವಾರ ಸಂಜೆ ಆದೇಶ ಹೊರಡಿಸಿದ್ದಾರೆ.
‘ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಕಾರಣದಿಂದ ಮುನ್ನೆಚ್ಚರಿಕೆ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಊಟಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಪರ್ಕ ಕಡಿತ
ಮೈಸೂರು: ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ತಗ್ಗು ಪ್ರದೇಶಗಳು ಜಲಾವೃತವಾಗಿದ್ದು ಪ್ರವಾಹದ ಅಪಾಯ ಎದುರಾಗಿದೆ.
ಕಪಿಲಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು ಊಟಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಪರ್ಕ ಕಡಿತಗೊಂಡಿದೆ. ಪೊಲೀಸರು ಮುನ್ನೆಚ್ಚರಿಕೆ ವಹಿಸಿದ್ದು ಬದಲಿ ಮಾರ್ಗದ ಮೂಲಕ ವಾಹನ ಸವಾರರನ್ನು ಕಳುಹಿಸುತ್ತಿದ್ದಾರೆ.
ಕಬಿನಿ ಜಲಾಶಯದಿಂದ 74 ಸಾವಿರ ಕ್ಯೂಸೆಕ್ ನೀರನ್ನು ಹೊರ ಬಿಡಲಾಗಿದ್ದು ನದಿ ಪಾತ್ರದ ಪ್ರದೇಶಗಳು ಜಲಾವೃತವಾಗಿದೆ.
ಅಣೆಕಟ್ಟೆ ನಿರ್ಮಾಣವಾದ ಜಲಾಶಯದ ಇತಿಹಾಸದಲ್ಲೇ 75 ಸಾವಿರ ಕ್ಯೂಸೆಕ್ ನೀರನ್ನು ಹೊರ ಬಿಡಲಾಗಿದೆ ಎಂದು ಜಲಾಶಯದ ಕಾರ್ಯಪಾಲಕ ಅಭಿಯಂತರ ಜಗದೀಶ್ ಉದಯವಾಣಿಗೆ ತಿಳಿಸಿದ್ದಾರೆ.
ಸೂತ್ತೂರು ಕ್ಷೇತ್ರಕ್ಕೆ ಸಂಪರ್ಕಿಸುವ ಸೇತುವೆಯೂ ಮುಳುಗಡೆಯಾಗಿದ್ದು, ಜನರು , ಮಠಕ್ಕಾಗಮಿಸುವವರು,ಹೊಲಗಳಿಗೆ ತೆರಳುವಾಗ ರೈತರು ಎಚ್ಚರ ವಹಿಸಲು ಸುತ್ತೂರು ಶ್ರೀಗಳು ಮನವಿ ಮಾಡಿದ್ದಾರೆ.
ಎಚ್.ಡಿ.ಕೋಟೆಯಲ್ಲೂ ತಗ್ಗು ಪ್ರದೇಶಗಳು ಜಲಾವೃತವಾಗಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ.
ತಾಲೂಕಿನ ಚಕ್ಕೂರು, ಹೊಮ್ಮರಗಳ್ಳಿ ಸಮೀಪ ಹರಿಯುವ ಕಪಿಲಾ ನದಿಗೆ ಅಡ್ಡಲಾಗಿ ಕಟ್ಟಿರುವ ದೊಡ್ಡ ಸೇತುವೆಗಳು ಸಂಪೂರ್ಣ ಮುಳುಗಡೆಯಾಗಿವೆ. ಎಚ್.ಡಿ.ಕೋಟೆ ಮತ್ತು ಸರಗೂರು ಪಟ್ಟಣಕ್ಕೆ ಸಂಪರ್ಕ ಕಲ್ಪಿಸುವ ತುಂಬಸೋಗೆ ಸಮೀಪದ ಸೇತುವೆ ಬಹುತೇಕ ತುಂಬಿ ಹರಿಯುತ್ತಿದ್ದು, ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಬೆಳೆಗಳಿಗೆ ನೀರು ನುಗ್ಗಿ ಜಲಾವೃತಗೊಂಡು ಅಪಾರ ನಷ್ಟ ಸಂಭವಿಸಿದೆ.