ನವದೆಹಲಿ: ನಾಲ್ವರು ಸುಪ್ರೀಂ ಕೋರ್ಟ್ನ ನ್ಯಾಯಮೂರ್ತಿಗಳು ಸುದ್ದಿಗೋಷ್ಠಿಯಲ್ಲಿ ಮಾಡಿರುವ ಆರೋಪಗಳು ನ್ಯಾಯಾಂಗ ವ್ಯವಸ್ಥೆಯ ಆಂತರಿಕ ವಿಷಯ, ಹಾಗಾಗಿ ಕೇಂದ್ರ ಸರ್ಕಾರ ಈ ವಿಷಯದಲ್ಲಿ ಮಧ್ಯಪ್ರವೇಶಿಸುವ ಸಾಧ್ಯತೆ ಕಡಿಮೆ ಇದೆ ಎಂದು ಕೇಂದ್ರ ಸರ್ಕಾರದ ಕಾನೂನು ಸಚಿವಾಲಯದ ಮೂಲಗಳು ತಿಳಿಸಿವೆ.
ಕೇಂದ್ರ ಸರ್ಕಾರ ನ್ಯಾಯಾಂಗ ವ್ಯವಸ್ಥೆಯ ಆಂತರಿಕ ವಿಷಯದಲ್ಲಿ ಹಸ್ತಕ್ಷೇಪ ಮಾಡಲು ಬಯಸುವುದಿಲ್ಲ. ಜತೆಗೆ ಸುಪ್ರೀಂ ಕೋರ್ಟ್ ತನ್ನಲ್ಲಿರುವ ಸಮಸ್ಯೆಗಳನ್ನು ತಾನೇ ಇತ್ಯರ್ಥ ಪಡಿಸಿಕೊಳ್ಳಬೇಕು. ದೇಶದ ಜನತೆ ಸುಪ್ರೀಂ ಕೋರ್ಟ್ ಮೇಲಿಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳುವ ಸಲುವಾಗಿ ಆದಷ್ಟು ಬೇಗ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು ಎಂದು ಮೂಲಗಳು ತಿಳಿಸಿವೆ.
ನಾಲ್ವರು ನ್ಯಾಯಮೂರ್ತಿಗಳ ಸುದ್ದಿಗೋಷ್ಠಿಯ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ತುರ್ತು ಸಭೆ ಕರೆದು ವಿಷಯದ ಕುರಿತು ಚರ್ಚೆ ನಡೆಸುತ್ತಿದ್ದಾರೆ. ಜತೆಗೆ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರು ಅಟಾರ್ನಿ ಜನರಲ್ ಕೆ.ಕೆ. ವೇಣುಗೋಪಾಲ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.