janadhvani

Kannada Online News Paper

ಉಪಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ‘ದೋಸ್ತಿ’ ಗೆ ಜನ ಮನ್ನಣೆ

ಬೆಂಗಳೂರು, ನ.6- ಮುಂದಿನ ಲೋಕಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗಿದ್ದ 3 ಲೋಕಸಭೆ ಹಾಗೂ 2 ವಿಧಾನ ಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ದೋಸ್ತಿ ಪಕ್ಷಗಳನ್ನು ಪುರಸ್ಕ ರಿಸಿರುವ ಮತದಾರರು, ಪ್ರತಿಪಕ್ಷ ಬಿಜೆಪಿಯನ್ನು ತಿರಸ್ಕರಿಸಿದ್ದಾರೆ. ನಿರೀಕ್ಷೆಯಂತೆ ಮಂಡ್ಯ, ಬಳ್ಳಾರಿ ಲೋಕಸಭೆ ಹಾಗೂ ರಾಮನಗರ ಮತ್ತು ಜಮಖಂಡಿ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕೂಟದ ಅಭ್ಯರ್ಥಿಗಳು ಜಯ ಸಾಧಿಸಿದ್ದಾರೆ.

ಶಿವಮೊಗ್ಗದಲ್ಲಿ ಮಾತ್ರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ಬಿ.ವೈ.ರಾಘವೇಂದ್ರ ಪ್ರಯಾಸದ ಗೆಲುವು ಸಾಧಿಸಿ, ಪಕ್ಷದ ಮಾನವನ್ನು ಕಾಪಾಡಿದ್ದಾರೆ. ಇಲ್ಲಿ ಕಾಂಗ್ರೆಸ್-ಜೆಡಿಎಸ್ ಬೆಂಬಲಿತ ಅಭ್ಯರ್ಥಿ ನಿರೀಕ್ಷೆಗೂ ಮೀರಿದ ಪೈಪೋಟಿ ನೀಡಿರುವುದು ವಿಶೇಷವಾಗಿದೆ.ಈ ಫಲಿತಾಂಶದಿಂದ ದೋಸ್ತಿ ಸರ್ಕಾರ ಇನ್ನಷ್ಟು ಗಟ್ಟಿಯಾಗಿದ್ದು, ಫಲಿತಾಂಶದ ನಂತರ ಸರ್ಕಾರ ಅಸ್ಥಿರಗೊಳಿಸಲು ತೆರೆಮರೆಯಲ್ಲಿ ಯತ್ನಿಸಿದ್ದ ಬಿಜೆಪಿಗೆ ಭಾರೀ ಹಿನ್ನೆಡೆಯಾಗಿದೆ. ಅಲ್ಲದೆ ಬಿಜೆಪಿಯಲ್ಲಿ ಕೆಲವು ನಾಯಕರ ತಲೆದಂಡವಾಗಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

# ದಾಖಲೆಯ ಗೆಲುವು
ಭಾರೀ ಜಿದ್ದಾಜಿದ್ದಿನಿಂದ ಕೂಡಿದ್ದ ಬಳ್ಳಾರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಉಗ್ರಪ್ಪ ದಾಖಲೆಯ ಮತಗಳ ಅಂತರದಿಂದ ಜಯಗಳಿಸಿದ್ದರೆ, ಬಿಜೆಪಿ ಅಭ್ಯರ್ಥಿ ಜೆ.ಶಾಂತಾ ತೀವ್ರ ಮುಖಭಂಗ ಅನುಭವಿಸಿದ್ದಾರೆ. ಎಲ್ಲರ ನಿರೀಕ್ಷೆಗಳನ್ನು ತಲೆಕೆಳಗೆ ಮಾಡಿ ಕಣಕ್ಕಿಳಿದಿದ್ದ ಕಾಂಗ್ರೆಸ್‍ನ ವಿ.ಎಸ್.ಉಗ್ರಪ್ಪ ಸುಮಾರು 2,14,826 ಮತಗಳ ಅಂತರದಿಂದ ದಾಖಲೆಯ ಗೆಲುವು ಸಾಧಿಸಿದ್ದಾರರೆ.ವಿಜೇತ ಅಭ್ಯರ್ಥಿ ಉಗ್ರಪ್ಪ 5,54,139 ಮತಗಳನ್ನು ಪಡೆದರೆ ಪರಾಜಿತ ಅಭ್ಯರ್ಥಿ ಬಿಜೆಪಿಯ ಜೆ.ಶಾಂತಾ 3,39,319 ಮತಗಳನ್ನು ಪಡೆದಿದ್ದಾರೆ. ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಶ್ರೀರಾಮುಲು ನಡುವಿನ ಪ್ರತಿಷ್ಠೆಯ ಕಣವಾಗಿದ್ದ ಬಳ್ಳಾರಿ ಸುಮಾರು 18 ವರ್ಷಗಳ ಬಳಿಕ ಮತ್ತೆ ಕಾಂಗ್ರೆಸ್ ತೆಕ್ಕೆಗೆ ಜಾರಿಗೆ.

# ಪ್ರಯಾಸದ ಗೆಲುವು
ಬಿಜೆಪಿಯ ಭದ್ರಕೋಟೆ ಎಂದೇ ಹೇಳಲಾಗಿದ್ದ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ಬಿ.ವೈ.ರಾಘವೇಂದ್ರ ಪ್ರಯಾಸದ ಗೆಲುವು ಸಾಧಿಸಿದ್ದಾರೆ. ಭಾರೀ ಹಣಾಹಣಿಯಿಂದ ಕೂಡಿದ್ದ ಈ ಕ್ಷೇತ್ರದಲ್ಲಿ ಕಾಂಗ್ರೆಸ್-ಜೆಡಿಎಸ್ ಒಮ್ಮತದ ಅಭ್ಯರ್ಥಿ ಮಧು ಬಂಗಾರಪ್ಪ ನಿರೀಕ್ಷೆಗೂ ಮೀರಿದ ಪೈಪೋಟಿ ನೀಡಿ ವಿರೋಚಿತ ಸೋಲು ಕಂಡಿದ್ದಾರೆ. ಬಿಜೆಪಿಯ ಬಿ.ವೈ.ರಾಘವೇಂದ್ರ ಅವರು 5,42,304 ಮತ ಪಡೆದರೆ, ಮಧು ಬಂಗಾರಪ್ಪ 4,90,774 ಮತಗಳಿಸಿದ್ದಾರೆ.ಬಿಜೆಪಿ ಇಲ್ಲಿ 7 ಶಾಸಕರನ್ನು ಹೊಂದಿದ್ದರೂ 51,530 ಮತಗಳ ಅಂತರದಿಂದ ಗೆಲುವು ಸಾಧಿಸಿದೆ.

ಶಿವಮೊಗ್ಗದಲ್ಲಿ ಗೆಲ್ಲಲೇಬೇಕು ಎಂದು ಕ್ಷೇತ್ರದಲ್ಲೇ ಠಿಕಾಣಿ ಹೂಡಿ, ಪ್ರಚಾರ ನಡೆಸಿದ್ದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಸಂಘಟಿತ ಹೋರಾಟ ಫಲಕೊಟ್ಟಿಲ್ಲ. ಯಡಿಯೂರಪ್ಪ ಅವರ ವರ್ಚಸ್ಸು, ಆರ್‍ಎಸ್‍ಎಸ್ ಬೆಂಬಲದಿಂದಾಗಿ ರಾಘವೇಂದ್ರ ಗೆಲುವು ಸಾಧಿಸಿ 2ನೆ ಬಾರಿಗೆ ಲೋಕಸಭೆಗೆ ಪ್ರವೇಶಿಸಿದ್ದಾರೆ.

# ಸಕ್ಕರೆ ಜಿಲ್ಲೆಯಲ್ಲಿ ಜೆಡಿಎಸ್ ಪಾರುಪತ್ಯ
ಜೆಡಿಎಸ್‍ನ ಭದ್ರಕೋಟೆ ಎಂದೇ ಹೇಳಲಾಗುತ್ತಿದ್ದ ಮಂಡ್ಯದಲ್ಲಿ ನಿರೀಕ್ಷೆಯಂತೆ ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಎಲ್.ಆರ್.ಶಿವರಾಮೇಗೌಡ ದಾಖಲೆಯ ಗೆಲುವು ಸಾಧಿಸಿದ್ದಾರೆ.ಎಲ್.ಆರ್.ಶಿವರಾಮೇಗೌಡ ಅವರು 5,69,302 ಮತಗಳನ್ನು ಪಡೆದರೆ, ಬಿಜೆಪಿಯಿಂದ ಸ್ಪರ್ಧಿಸಿದ್ದ ನಿವೃತ್ತ ಅಧಿಕಾರಿ ಡಾ.ಸಿದ್ದರಾಮಯ್ಯ 2,44,377 ಮತಗಳನ್ನು ಪಡೆದು ತೀವ್ರ ಮುಖಭಂಗ ಅನುಭವಿಸಿದ್ದಾರೆ.ಶಿವರಾಮೇಗೌಡ ಅವರು 3,24,925 ಮತಗಳ ಅಂತರದಿಂದ ಗೆಲುವು ಸಾಧಿಸಿ ಹೊಸ ದಾಖಲೆ ನಿರ್ಮಿಸಿದ್ದಾರೆ. ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳು ಜೆಡಿಎಸ್ ತೆಕ್ಕೆಯಲ್ಲಿ ಇದ್ದದ್ದು, ಈ ಗೆಲುವಿಗೆ ಸಹಕಾರಿಯಾಗಿದೆ. ಈ ಹಿಂದೆ ಮಂಡ್ಯದಲ್ಲಿ ಅಂಬರೀಶ್ ಹೆಸರಿನಲ್ಲಿದ್ದ ದಾಖಲೆಯನ್ನು ಶಿವರಾಮೇಗೌಡ ಮುರಿದಿದ್ದಾರೆ.

# ರಾಮನಗರದಲ್ಲಿ ಅನಿತಾ ಕುಮಾರಸ್ವಾಮಿ ಗೆಲುವು
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ರಾಜೀನಾಮೆಯಿಂದ ತೆರವಾಗಿದ್ದ ರಾಮನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ನಿರೀಕ್ಷೆಯಂತೆ ಜೆಡಿಎಸ್ ಅಭ್ಯರ್ಥಿ ಅನಿತಾ ಕುಮಾರಸ್ವಾಮಿ ಭಾರೀ ಮತಗಳಿಂದ ಗೆಲುವು ಸಾಧಿಸಿ ಹೊಸ ದಾಖಲೆ ಸೃಷ್ಟಿಸಿದ್ದಾರೆ. ಮತದಾನಕ್ಕೂ ಮುನ್ನವೇ ಬಿಜೆಪಿ ಅಭ್ಯರ್ಥಿ ಎಲ್.ಚಂದ್ರಶೇಖರ್ ಚುನಾವಣಾ ಕಣದಿಂದ ಹಿಂದೆ ಸರಿದಿದ್ದರಿಂದ ಈ ಕ್ಷೇತ್ರದ ಫಲಿತಾಂಶದ ಬಗ್ಗೆ ಕುತೂಹಲ ಇರಲಿಲ್ಲ. ವಿಜೇತ ಅಭ್ಯರ್ಥಿ ಅನಿತಾ ಕುಮಾರಸ್ವಾಮಿ 1,25,043 ಮತಗಳನ್ನು ಪಡೆದಿದ್ದಾರೆ. ಬಿಜೆಪಿ ಅಭ್ಯರ್ಥಿಯಾಗಿದ್ದ ಎಲ್.ಚಂದ್ರಶೇಖರ್ ಕಣದಿಂದ ಹಿಂದೆ ಸರಿದಿದ್ದರೂ ಅವರಿಗೆ 15,906 ಮತಗಳು ಬಂದಿವೆ. ವಿಜೇತ ಅಭ್ಯರ್ಥಿ ಅನಿತಾ ಕುಮಾರಸ್ವಾಮಿ 1,09,137 ಮತಗಳ ಅಂತರದಿಂದ ಗೆಲುವು ಸಾಧಿಸಿ, ರಾಮನಗರ ಇತಿಹಾಸದಲ್ಲೇ ಹೊಸ ದಾಖಲೆಯನ್ನು ನಿರ್ಮಿಸಿದ್ದಾರೆ. ಈ ಹಿಂದೆ ಯಾವುದೇ ಅಭ್ಯರ್ಥಿ ಇಷ್ಟು ಮತಗಳ ಅಂತರದ ಗೆಲುವು ಸಾಧಿಸಿರಲಿಲ್ಲ.

# ಕೈಹಿಡಿದ ಅನುಕಂಪ
ಜಮಖಂಡಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ನಿರೀಕ್ಷೆಯಂತೆ ತಂದೆಯ ಸಾವಿನ ಅನುಕಂಪ, ಕಾಂಗ್ರೆಸ್ ಅಭ್ಯರ್ಥಿ ಆನಂದ್ ನ್ಯಾಮಗೌಡ ಅವರ ಕೈ ಹಿಡಿದಿದೆ. ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ದಿ.ಸಿದ್ದುನ್ಯಾಮಗೌಡ ಅವರ ಹೆಸರನ್ನೇ ಪ್ರಸ್ತಾಪಿಸಿ ಅನುಕಂಪ ಗಿಟ್ಟಿಸಿಕೊಂಡ ಅವರ ಪುತ್ರ ಆನಂದ್ ನ್ಯಾಮಗೌಡ 97,017 ಮತ ಪಡೆದರೆ, ಬಿಜೆಪಿ ಅಭ್ಯರ್ಥಿ ಶ್ರೀಕಾಂತ್ ಕುಲಕರ್ಣಿ 57537 ಮತಗಳನ್ನು ಪಡೆದಿದ್ದಾರೆ.ಆನಂದ್ ನ್ಯಾಮಗೌಡ ಸುಮಾರು 39,480 ಮತಗಳ ಅಂತರದಿಂದ ಗೆಲುವು ಸಾಧಿಸಿ ಮೊದಲ ಬಾರಿಗೆ ವಿಧಾನಸಭೆಯನ್ನು ಪ್ರವೇಶಿಸಿದ್ದಾರೆ.

ಆಪರೇಷನ್ ಕಮಲದ ಮೂಲಕ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸಿ ಅಧಿಕಾರ ಹಿಡಿಯಲು ಮುಂದಾಗಿದ್ದ ಬಿಜೆಪಿಗೆ ಈ ಫಲಿತಾಂಶ ಎಚ್ಚರಿಕೆಯ ಗಂಟೆಯಾಗಿ ಪರಿಣಮಿಸಿದೆ. ಇನ್ನು ಹಲವು ಅಪಸ್ವರಗಳ ನಡುವೆಯೇ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಸದ್ಯಕ್ಕೆ ಅಪಾಯದ ತೂಗುಗತ್ತಿಯಿಂದ ಪಾರಾಗಿದೆ.  ಒಟ್ಟಾರೆ ಉಪ ಚುನಾವಣೆಯ ಫಲಿತಾಂಶದಿಂದ ಕಾಂಗ್ರೆಸ್-ಜೆಡಿಎಸ್ ನೇತೃತ್ವದ ದೋಸ್ತಿ ಇನ್ನಷ್ಟು ಗಟ್ಟಿಯಾಗಲಿದ್ದು, 2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಭಾರೀ ಸವಾಲು ಎದುರಾಗಿದೆ.

error: Content is protected !! Not allowed copy content from janadhvani.com